ಬೆಂಗಳೂರು:''ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ''ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ನ ಗುತ್ತಿಗೆದಾರನ ಡೆತ್ ನೋಟ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜೀನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ'' ಎಂದರು.
''ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ, ಇಂತಹುದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಅವರ ಹೆಸರನ್ನು ಡೆತ್ ನೋಟ್ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ'' ಎಂದು ಆರೋಪಿಸಿದರು.
ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ:ಬಿಜೆಪಿಯವರು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ''ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ'' ಎಂದು ತಿರುಗೇಟು ನೀಡಿದರು.