ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿರುವ ಕೃಷ್ಣರಾಜ ಸಾಗರ(ಕೆಆರ್‌ಎಸ್)ಜಲಾಶಯದ 20 ಕಿ. ಮೀ ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಕಳೆದ ವರ್ಷ ಮಾಡಿರುವ ಮಧ್ಯಂತರ ಆದೇಶ ಪಾಲಿಸದಿರುವವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ವೈ.ಸಿ ಮಧು ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ಈ ಆದೇಶ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ.
ಘೋಷಿತ ಜಲಾಶಯಗಳನ್ನು ರಕ್ಷಿಸುವ ಸದುದ್ದೇಶದಿಂದ ಮಧ್ಯಂತರ ಆದೇಶ ಮಾಡಲಾಗಿದೆ. ಇಂಥ ಪ್ರಕರಣಗಳಲ್ಲಿ ವಾದದ ಅರ್ಜಿ ಸಲ್ಲಿಸುವ ಹಕ್ಕಿನ (ಲೋಕಸ್ಟಾಂಡೈ) ವಿಚಾರ ಅನ್ವಯಿಸುವುದಿಲ್ಲ. ಯಾರು ಬೇಕಾದರೂ ನ್ಯಾಯಾಲಯದ ಮೆಟ್ಟಿಲೇರಬಹುದು ಎಂದು ಕೋರ್ಟ್ ತಿಳಿಸಿದೆ. ಅಲ್ಲದೆ, ಮಂಚಮ್ಮ ದೇವಿ ಸ್ಟೋನ್ ಕ್ರಷರ್ ಮತ್ತು ಎಂ-ಸ್ಯಾಂಡ್‌ಗೆ ಆದೇಶದ ಪ್ರತಿ ಕಳುಹಿಸುವಂತೆಯೂ ನ್ಯಾಯಾಲಯವು ರಿಜಿಸ್ಟ್ರಿಗೆ ನಿರ್ದೇಶಿಸಿದೆ. ಅಲ್ಲದೇ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದರೆ ಸರ್ಕಾರವು ಲೋಕಸ್ಟಾಂಡೈ ವಿಚಾರವನ್ನು ಎತ್ತುವಂತಿಲ್ಲ ಎಂದೂ ಸ್ಪಷ್ಟಪಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಆರ್‌ಎಸ್ ಸುತ್ತಲು 20 ಕಿ ಮೀ ವ್ಯಾಪ್ತಿಯಲ್ಲಿ ಸ್ಫೋಟ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಆದಾಗ್ಯೂ, ಸ್ಫೋಟ ಮತ್ತು ಗಣಿಗಾರಿಕೆ ನಡೆಸಲಾಗುತ್ತಿದೆ. ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲು ಅಧಿಕೃತ ಪ್ರತಿವಾದಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆಕ್ಷೇಪಿಸಿದರು.