ಕರ್ನಾಟಕ

karnataka

ETV Bharat / state

ರೆಡ್ ಅಲರ್ಟ್: ಉಡುಪಿ, ದ.ಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ಇಂದು ರಜೆ - holiday for schools and colleges

ಭರ್ಜರಿ ಮಳೆಯಾಗುತ್ತಿರುವ ಹಿನ್ನೆಲೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ ಎರಡೂ ಜಿಲ್ಲೆಗಳಲ್ಲಿ ಇಂದು (ಜು.9) ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಳೆ
ಮಳೆ (ETV Bharat)

By ETV Bharat Karnataka Team

Published : Jul 8, 2024, 9:47 PM IST

ಉಡುಪಿ:ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜು.9)ರಂದು ಜಿಲ್ಲಾದ್ಯಂತ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜು.9 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಐಟಿಐಗಳಿಗೆ ರಜೆ ಇರುವುದಿಲ್ಲ.

ದಕ್ಷಿಣ ಕನ್ನಡ ಶಾಲಾ - ಕಾಲೇಜುಗಳಿಗೂ ರಜೆ:ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು.9 ರಂದು ರಜೆ ಘೋಷಿಸಿ‌ ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್ ಆದೇಶಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು.9 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ - ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು ಸೇರಿದಂತೆ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯಿತಿ/ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ:ಮಳೆ ಅಬ್ಬರ; ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಹಲವೆಡೆ ಯೆಲ್ಲೋ ಅಲರ್ಟ್​ ಘೋಷಣೆ - Rain Red Alert

ABOUT THE AUTHOR

...view details