ಬೆಂಗಳೂರು:ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ಧಿಗೆ ಬದ್ಧವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.
ಆಂಧ್ರ ಪ್ರದೇಶ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ಸಲಹೆ ನೀಡಿ. ನೀರಾವರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದು ಹೇಳಿದರು.
ಸ್ಕೈ ಡೆಕ್ ನಿರ್ಮಾಣಕ್ಕೆ ಶೀರ್ಘದಲ್ಲೇ ಟೆಂಡರ್: ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.