ಚಿಕ್ಕಮಗಳೂರು:ಜಿಲ್ಲೆಯ ಮಲೆನಾಡು ಭಾಗ ಹಾಗೂ ಬಯಲು ಸೀಮೆ ಭಾಗದಲ್ಲಿ ಕಳೆದ 12 ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಮಳೆಗಾಗಿ ಕಾಯುತ್ತಿದ್ದ ಮಲೆನಾಡು ಹಾಗೂ ಬಯಲುಸೀಮೆ ಭಾಗದ ಜನರು ಈಗ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತತ್ತರಿಸಿ ಹೋಗುವ ಲಕ್ಷಣಗಳು ಗೋಚರಿಸುತ್ತಿವೆ.
ಮಕ್ಕಳಿಗೆ ಬೇಸಿಗೆ ರಜೆ ಇರುವ ಕಾರಣ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಇಲ್ಲಿಯ ಪ್ರವಾಸಿ ತಾಣದ ಸೌಂದರ್ಯ ಹಾಗೂ ಸೊಬಗನ್ನು ಸವಿಯಲು ಕಾಫಿನಾಡಿಗೆ ಬರಲು ಆರಂಭಿಸಿದ್ದಾರೆ. ಭಾನುವಾರವಂತು ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದು, ಇನ್ನೊಂದು ಕಡೆ ನಿರಂತರವಾಗಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆ, ವಾಹನಗಳ ದಟ್ಟಣೆ ಹೆಚ್ಚಾದ ಹಿನ್ನೆಲೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ನಿನ್ನೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು. ವೀಕೆಂಡ್ ಹಿನ್ನೆಲೆ ಅಕ್ಕಪಕ್ಕದ ಜಿಲ್ಲೆ ಸೇರಿದಂತೆ ಅಂತಾರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ವಾಹನಗಳಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದ್ದರು.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ ವಿಭಾಗದಲ್ಲಿರುವ ಚಾರ್ಮಾಡಿ ಘಾಟ್ನಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಪ್ರತಿನಿತ್ಯ ಈ ರಸ್ತೆಯಲ್ಲಿ ಸಾಕಷ್ಟು ವಾಹನಗಳು ಸಂಚರಿಸುತ್ತವೆ.
ಇದನ್ನೂ ಓದಿ:ಚಿಕ್ಕಮಗಳೂರು: ಅಬ್ಬರಿಸಿದ ಮಳೆರಾಯ, ಕಾಪಿನಾಡು ತತ್ತರ - Chikkamagaluru Rain