ಕರ್ನಾಟಕ

karnataka

ETV Bharat / state

ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ; ಸಚಿವ ನಾಗೇಂದ್ರಗೆ ಸಮನ್ಸ್ ಕೊಡುತ್ತೇವೆ, ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ: ಶಿವಕುಮಾರ್ - DCM DK Shivakumar - DCM DK SHIVAKUMAR

ರಾಜ್ಯದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಸಚಿವ ಬಿ. ನಾಗೇಂದ್ರ ಅವರಿಗೆ ಸಮನ್ಸ್ ಜಾರಿ, ಮಾಹಿತಿ ಪಡೆಯುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

DK Shivakumar
ಡಿ.ಕೆ.ಶಿವಕುಮಾರ್ (ETV Bharat)

By ETV Bharat Karnataka Team

Published : May 30, 2024, 9:11 PM IST

ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ, ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಚಿವರ ರಾಜೀನಾಮೆ ಕೇಳುವುದು ವಿಪಕ್ಷಗಳ ಧರ್ಮ, ಅವರು ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಸಹ ಗಂಭೀರವಾಗಿ ಪರಿಗಣಿಸಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ. ಆಧಾರವಿಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಪ್ಪು ಯಾರೇ ಮಾಡಿದರೂ ತಪ್ಪೇ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರ ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಗುತ್ತಿಗೆದಾರರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಅಂದಿನ ಸಚಿವ ಕೆ.ಎಸ್​.ಈಶ್ವರಪ್ಪನವರ ರಾಜೀನಾಮೆ ವಿಚಾರದ ಪ್ರತಿಕ್ರಿಯಿಸಿದ ಶಿವಕುಮಾರ್, ಆತ್ಮಹತ್ಯೆ ಪತ್ರದಲ್ಲಿ ಸಚಿವರ ಮೌಖಿಕ ಆದೇಶವಿದೆ ಎಂದು ಅಧಿಕಾರಿಗಳು ಹೇಳಿದ್ದರು ಎಂದು ಉಲ್ಲೇಖಿಸಲಾಗಿದೆ. ಸಚಿವ ನಾಗೇಂದ್ರ ಅವರ ವಿರುದ್ಧ ನೇರ ಆರೋಪವಿಲ್ಲ. ಈ ವಿಚಾರವಾಗಿ ಸರ್ಕಾರ ತನಿಖೆ ಮಾಡಲಿದೆ. ಇದು ಸಣ್ಣ ವಿಚಾರವಲ್ಲ. 10 ಲಕ್ಷ ಅಕ್ರಮ ನಡೆದರೂ ಅಕ್ರಮವೇ. ನಾನು ಪ್ರಕರಣದ ಎಫ್ಐಆರ್ ಓದಿದ್ದೇನೆ. ಸಚಿವರನ್ನು ಕರೆಸಿ ಮಾಹಿತಿ ಪಡೆಯುತ್ತೇವೆ. ಅವರಿಗೆ ಸಮನ್ಸ್​ ಕೊಡುತ್ತೇವೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ ಎಂದು ಹೇಳಿದರು.

65 ಸಂಭಾವ್ಯರ ಪಟ್ಟಿ ಸಿದ್ಧ:ಇದೇ ವೇಳೆ,ವಿಧಾನ ಪರಿಷತ್ ಚುನಾವಣೆಗೆ ನಮ್ಮ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ದೆಹಲಿ ನಾಯಕರೊಂದಿಗೆ ಚರ್ಚೆ ಮಾಡಿ ಎಲ್ಲ ವರ್ಗದ 65 ಸಂಭಾವ್ಯರ ಪಟ್ಟಿಯನ್ನು ಕೊಟ್ಟು ಬಂದಿದ್ದೇವೆ. ಉಳಿದಂತೆ ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಮಾಜಿ ಶಾಸಕ ಯತೀಂದ್ರ ಅವರ ವಿಚಾರವಾಗಿ ಹೈಕಮಾಂಡ್ ನಾಯಕರು ಈಗಲೇ ಮಾತು ಕೊಟ್ಟಿದ್ದರು. ಕೇವಲ ಬೆಂಗಳೂರು ಮಾತ್ರವಲ್ಲದೇ ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲ ವಲಯಗಳಿಂದಲೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಂಗಳೂರಿನಲ್ಲಿ 21, ಚಿಕ್ಕಮಗಳೂರಿನಲ್ಲಿ 9 ಮಂದಿ ಆಕಾಂಕ್ಷಿಗಳಿದ್ದಾರೆ. ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು. ಅನೇಕ ಪ್ರಮುಖರು, ಹಿರಿಯರು ಹಾಗೂ ಚುನಾವಣೆಯಲ್ಲಿ ಸೋತವರು, ವಿಧಾನಸಭೆ ಟಿಕೆಟ್ ತ್ಯಾಗ ಮಾಡಿರುವವರು ಟಿಕೆಟ್ ಕೇಳಿದ್ದು, ಹೈಕಮಾಂಡ್ ನಾಯಕರು ಅಂತಿಮ ತೀರ್ಮಾನ ಮಾಡಲಿದ್ದಾರೆ ಎಂದರು. ಸಚಿವ ಬೋಸರಾಜು ಮುಂದುವರಿಯುತ್ತಾರಾ ಎಂಬ ಪ್ರಶ್ನೆಗೆ ಡಿಕೆಶಿ, ಈ ವಿಚಾರವಾಗಿಯೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ ಎಂದಷ್ಟೇ ಹೇಳಿದರು.

ಜೂ.2ರಂದು ಶಾಸಕಾಂಗ ಪಕ್ಷದ ಸಭೆ:ಜೂನ್ 2ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶಾಸಕಾಂಗ ಪಕ್ಷದ ಸಭೆ ಇದೆ. ಪರಿಷತ್ ಸದಸ್ಯರು, ಶಾಸಕರು ಹಾಗೂ ಸಂಸದರಿಗೆ ಆಹ್ವಾನ ನೀಡಲಾಗುವುದು. ಪರಿಷತ್ ಚುನಾವಣೆ ಸೇರಿದಂತೆ ಪಕ್ಷದ ಕೆಲವು ವಿಚಾರ ಚರ್ಚೆ ಮಾಡಲಾಗುವುದು. ಜೂನ್ 1ರಂದು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸುರೇಶ್ ಅವರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಶುದ್ದ ಸುಳ್ಳು. ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಮುಗಿಯಲಿ. ನಾನು ಅಧಿಕಾರ ಬಿಡುವ ವೇಳೆಗೆ ಒಂದು ಹಂತಕ್ಕೆ ತಂದು ನಿಲ್ಲಿಸಬೇಕು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಕಟ್ಟಡ ದುರ್ಬಲವಾಗುತ್ತಿದ್ದು, ಹೊಸ ಕಟ್ಟಡ ನಿರ್ಮಾಣ ಮಾಡಬೇಕಿದೆ ಎಂದರು.

ಅಂಚೆ ಕಚೇರಿಯಲ್ಲಿ ಮಹಿಳೆಯರು ಖಾತೆ ತೆರೆಯಲು ಮುಂದಾಗುತ್ತಿರುವ ಬಗ್ಗೆ ಕೇಳಿದಾಗ ಪ್ರಶ್ನೆಗೆ, ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಲ್ಲಿ ಅಷ್ಟೊಂದು ವಿಶ್ವಾಸ ಮೂಡುತ್ತಿದೆ. 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರಲಿದೆ. ನಾವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ನೀಡಲಾಗುವುದು ಎಂದು ನಮ್ಮ ನಾಯಕರು ಹಾಗೂ ಮಿತ್ರ ಪಕ್ಷಗಳ ನಾಯಕರು ಹೇಳಿದ್ದಾರೆ ಎಂದರು.

ಇದನ್ನೂ ಓದಿ:ಸಿಎಂ ಹಾಗೂ ನನ್ನ ವಿರುದ್ಧ ಕೇರಳದಲ್ಲಿ ಶತ್ರು ಭೈರವಿ ಯಾಗ ಮಾಡಲಾಗುತ್ತಿದೆ: ಡಿಸಿಎಂ ಡಿಕೆಶಿ ಆರೋಪ

ABOUT THE AUTHOR

...view details