ತುಮಕೂರು: ಶ್ರೀಶಿವಕುಮಾರ ಸ್ವಾಮೀಜಿಯವರ 117ನೇ ಜಯಂತ್ಯುತ್ಸವ ಹಾಗೂ ಗುರುವಂದನ ಮಹೋತ್ಸವ ಏಪ್ರಿಲ್ 1 ರಂದು ಸಿದ್ದಗಂಗಾ ಮಠದ ಆವರಣದಲ್ಲಿ ನಡೆಯಲಿದ್ದು ಚುನಾವಣೆ ನೀತಿ ಸಂಹಿತೆ ಇರುವ ಹಿನ್ನೆಲೆ ಯಾವುದೇ ರಾಜಕಾರಣಿಗಳಿಗೆ ವೇದಿಕೆ ಮೇಲೆ ಮಾತನಾಡಲು ಅವಕಾಶವಿರುವುದಿಲ್ಲ. ಬದಲಾಗಿ ಅವರು ಗದ್ದುಗೆ ದರ್ಶನ ಮಾಡಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಂತೆ ಭಾಗವಹಿಸಬಹುದು ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ರಾಮದೇವ್ ಜಿ ಉದ್ಘಾಟಿಸಲಿದ್ದಾರೆ. ಮೈಸೂರಿನ ಶ್ರೀ ಸುತ್ತೂರು ವೀರ ಸಿಂಹಾಸನ ಸಂಸ್ಥಾನ ಮಠದ ಅಧ್ಯಕ್ಷತೆ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಂಡರಗಿ ಅನ್ನದಾನೇಶ್ವರ ಸಂಸ್ಥಾನದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡದ ಮುರುಘಮಠ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಗದಗದ ಶ್ರೀ ವೀರೇಶ್ವರ ಪುಣ್ಯಶ್ರಮದ ಅಧ್ಯಕ್ಷರಾದ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿರುವ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು.