ತುಂಗಭದ್ರಾ ಜಲಾಶಯದಲ್ಲಿ ಕೇವಲ 9 ಟಿಎಂಸಿ ನೀರು: ಆವರಿಸಿದ ಆತಂಕ ಕೊಪ್ಪಳ: ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು ಕುಡಿಯುವ ನೀರು ಮತ್ತು ಕೃಷಿಗಾಗಿ ಈ ಜಲಾಶಯ ನಂಬಿರುವ ಜನರಲ್ಲಿ ಆತಂಕ ಉಂಟಾಗಿದೆ.
ಒಟ್ಟು 133 ಟಿಎಂಸಿ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಸದ್ಯ 9 ಟಿಎಂಸಿ ನೀರು ಮಾತ್ರ ಉಳಿದಿದ್ದು ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಇಂದು ಸಲಹಾ ಸಮಿತಿ ಸಭೆ:ತುಂಗಭದ್ರಾ ಜಲಾಶಯದಲ್ಲಿ ನಿರಿನ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌದದಲ್ಲಿ ಇಂದು ಸಂಜೆ 4 ಗಂಟೆಗೆ ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ. ನೀರಿನ ಕೊರತೆಯಿಂದಾಗಿ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.
ಕುಡಿಯೋ ನೀರಿಗೆ ತತ್ವಾರ:ತುಂಗಭದ್ರಾ ಜಲಾಶಯದಲ್ಲಿ ಸದ್ಯ 9 ಟಿಎಂಸಿ ನೀರು ಸಂಗ್ರಹವಿದೆ. ಇದರಲ್ಲಿ ಪಕ್ಕದ ರಾಜ್ಯ ಆಂಧ್ರಪ್ರದೇಶದ ಪಾಲು 2.8 ಟಿಎಂಸಿ ನೀರು ಬಿಡಬೇಕು. ಕುಡಿಯುವ ನೀರಿಗಾಗಿ 1.8 ಟಿಎಂಸಿ ನೀರು ಮೀಸಲಿಡಬೇಕು. ಜೊತೆಗೆ 2 ಟಿಎಂಸಿ ನೀರು ಡೆಡ್ ಸ್ಟೋರೇಜ್. ಇದರೊಟ್ಟಿಗೆ ಬಿಸಿಲಿನ ಜಳಕ್ಕೆ ಆವಿಯಾಗುವ ಹೋಗುವ ನೀರು ಸೇರಿದಂತೆ ನೀರಿನ ಕೊರತೆಯಾಗುವ ಸಾಧ್ಯತೆ ಇದೆ. ಬಿಸಿಲು ಹೆಚ್ಚಾದಂತೆ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಇದನ್ನೂ ಓದಿ:ದಾವಣಗೆರೆ: ಬೇಸಿಗೆ ಮುನ್ನವೇ 126 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ