ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಆರಂಭಿಸಿರುವ ಎಸ್ಐಟಿ ಅಧಿಕಾರಿಗಳು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ. ಜಿ. ಪದ್ಮನಾಭ ಮತ್ತು ಮಾಜಿ ಲೆಕ್ಕಾಧಿಕಾರಿ ಪರುಶುರಾಮ್ ಜಿ. ದುರ್ಗಣ್ಣನವರ್ ಅವರನ್ನು ಬಂಧಿಸಿದ್ದಾರೆ.
ಹಗರಣ ಬೆಳಕಿಗೆ ಬಂದ ಬಳಿಕ ಮೇ 30ರಂದು ಇಬ್ಬರನ್ನೂ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು.
ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್, ಡೆತ್‌ನೋಟ್ ಬರೆದಿಟ್ಟು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನ ಅನ್ವಯ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಲ್ಲದೆ, ನಿಗಮದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಸಹ ಪ್ರಕರಣ ದಾಖಲಾಗಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ಶುಕ್ರವಾರ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಗಡುವು, ಸಿಎಂ ಮನೆ ಮುತ್ತಿಗೆ ಯತ್ನ - Valmiki corporation scam