ಉಡುಪಿ: ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮದ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಹಗರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಅನುಷ್ಠಾನ ಅಧಿಕಾರಿಯಾಗಿ ಅರುಣ್ ಕುಮಾರ್ ಅವರು ಪರಶುರಾಮ ಥೀಂ ಪಾರ್ಕ್ ಕಾಮಗಾರಿ ನಿರ್ವಹಿಸಿದ್ದು, ಈ ಕಾಮಗಾರಿಗೆ ಅಂದಾಜು ಮೊತ್ತ 11.05ಕೋಟಿ ರೂ. ಆಡಳಿತ್ಮಾತಕ ಮಂಜೂರಾತಿಗೊಂಡಿದೆ. ಈ ಪೈಕಿ 6.72 ಕೋಟಿ ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದೆ. ಆದರೆ ಕಾಮಗಾರಿ ಪೂರ್ಣಗೊಳಿಸದೇ, ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೆ, ಉದ್ಘಾಟನಾ ಕಾರ್ಯಕ್ರಮ ಮಾಡಲಾಗಿದೆ. ಈ ಇದರ ಕಾಮಗಾರಿಯ ಗುಣಮಟ್ಟ ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರ ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ.
ಅಲ್ಲದೆ ಈ ಪ್ರಕರಣದ ಬಗ್ಗೆ ಸಿಓಡಿ ಹಾಗೂ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ವಿಚಾರಣಾ ಆಯೋಗ ತನಿಖೆ ನಡೆಸುತ್ತಿವೆ. ಈ ಹಂತದಲ್ಲಿ ತನಿಖೆಗೆ ಅಡಚಣೆ ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಅವರ ಸ್ಥಾನಕ್ಕೆ ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ನಿರ್ದೇಶಕ ದಿವಾಕರ ಪಿ. ಅವರನ್ನು ಹೆಚ್ಚುವರಿ ಪ್ರಭಾರ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಜು.24ರಂದು ಆದೇಶ ಹೊರಡಿಸಿದ್ದಾರೆ.