ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ, ಹೈದರಾಬಾದ್‌ನ ಎಂ.ಚಂದ್ರಮೋಹನ್, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಿ.ಕೆ.ಜಗದೀಶ್ ಹಾಗೂ ಆಂಧ್ರಪ್ರದೇಶದ ಕೆ.ಶ್ರೀನಿವಾಸ್ ರಾವ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಜಾಮೀನು ಅರ್ಜಿಗಳು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದ್ದವು. ವಿಚಾರಣೆಯಲ್ಲಿ ಭಾಗಿಯಾಗಿದ್ದ ರಾಜ್ಯ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎನ್.ಜಗದೀಶ್, ಪ್ರಕರಣದಲ್ಲಿನ ಮತ್ತೊಬ್ಬ ಆರೋಪಿ ಜಾಮೀನು ಕೋರಿದ್ದಾರೆ. ಎಲ್ಲ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆಗೆ ನಿಗದಿಗೊಳಿಸಬೇಕು ಎಂದರು. ವಾದ ಆಲಿಸಿದ ಪೀಠವು, ಎಲ್ಲಾ ಪ್ರಕರಣಗಳನ್ನು ಒಟ್ಟಾಗಿ ವಿಚಾರಣೆಗೆ ನಿಗದಿಗೊಳಿಸಲು ರಿಜಿಸ್ಟ್ರಿಗೆ ಆದೇಶಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು.