ಬೆಂಗಳೂರು:ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರ ಉತ್ತರ ಸಮರ್ಪಕವಾಗಿಲ್ಲ ಎಂದು ವಿಧಾನಸಭೆಯಲ್ಲಿ ಇಂದೂ ಸಹ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ಮುಂದುವರೆಸಿದ್ದಾರೆ.
ಇಂದು ಬೆಳಗ್ಗೆ 10.45ರ ಹೊತ್ತಿಗೆ ಸದನ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷದ ಸದಸ್ಯರು ಸ್ಪೀಕರ್ ಮುಂದಿರುವ ಬಾವಿಗಿಳಿದು ಧರಣಿ ನಡೆಸಿ ಘೋಷಣೆ ಕೂಗಲಾರಂಭಿಸಿದರು. ಈ ವೇಳೆ ಆಡಳಿತ ಹಾಗೂ ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ವಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಪೀಕರ್ ಕಲಾಪವನ್ನು 10 ನಿಮಿಷ ಮುಂದೂಡಿದರು.
ಇದಕ್ಕೂ ಮುನ್ನ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಧರಣಿ ಕೈಬಿಟ್ಟು ತಮ್ಮ ತಮ್ಮ ಸ್ಥಾನಗಳಿಗೆ ತೆರಳಿ ಕಲಾಪ ಸುಗಮವಾಗಿ ನಡೆಯಲು ಸಹಕರಿಸುವಂತೆ ಮನವಿ ಮಾಡಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್ ಬಾಬು ಎದ್ದು ನಿಂತು ಮಾತನಾಡಲು ಮುಂದಾದರು. ಅಷ್ಟರಲ್ಲಿ ಕಾಂಗ್ರೆಸ್‌ನ ಹಲವು ಶಾಸಕರು ಎದ್ದು ನಿಂತು ಪ್ರತಿಯಾಗಿ ಮಾತನಾಡಲು ಮುಂದಾದರು. ಆಗ ಸದನದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿ ಗದ್ದಲ ಏರ್ಪಟ್ಟಿತ್ತು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಖ್ಯಮಂತ್ರಿಯವರು ಆಡಳಿತ ಪಕ್ಷದ ಶಾಸಕರಿಗೆ ತಮ್ಮನ್ನು ಸಮರ್ಥಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಅದಕ್ಕಾಗಿ ಇಂದು ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಗಲಾಟೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.