ಕರ್ನಾಟಕ

karnataka

ETV Bharat / state

ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು - VALMIKI CORPORATION SCAM

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಎಂಡಿ ಸೇರಿ ಮೂವರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಇನ್ನು ಇಬ್ಬರಿಗೆ ಜಾಮೀನು ಮಂಜೂರಾಗಿದೆ.

ವಾಲ್ಮೀಕಿ ನಿಗಮದ ಹಗರಣ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು
ಹೈಕೋರ್ಟ್ (ETV Bharat)

By ETV Bharat Karnataka Team

Published : Dec 24, 2024, 10:53 PM IST

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಮತ್ತು ಹೈದರಾಬಾದ್‌ನ ಉದ್ಯಮಿ ಹಾಗೂ ಸ್ಟಾಕ್ ಬ್ರೋಕರ್ ಶ್ರೀನಿವಾಸ ರಾವ್ ಅವರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಆದರೆ, ಇದೇ ಪ್ರಕರಣದ ಆರೋಪಿಗಳಾದ ಉದ್ಯಮಿಗಳಾದ ಹೈದರಾಬಾದ್‌ನ ಚಂದ್ರಮೋಹನ್ ಮತ್ತು ಶಿವಮೊಗ್ಗದ ಜಿ.ಕೆ.ಜಗದೀಶ್‌ಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಪ್ರಕರಣದ ಸಂಬಂಧ ಆರೋಪಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಇದೇ ರೀತಿಯ ಮತ್ತೊಂದು ಪ್ರಕರಣಗಳಲ್ಲಿ ಭಾಗಿಯಾಗಿರುವ ಎರಡನೇ ಆರೋಪಿ ಶ್ರೀನಿವಾಸ ರಾವ್ ಕಾಕಿ ಮತ್ತು ಐದನೇ ಆರೋಪಿ ಪದ್ಮನಾಭ ಅವರಿಗೆ ಜಾಮೀನು ಮಂಜೂರು ಮಾಡಿದರೆ ಅವರು ಮತ್ತದೇ ಕೃತ್ಯದಲ್ಲಿ ಭಾಗಿಯಾಗಬಹುದು ಎಂದು ಅಭಿಪ್ರಾಯ ಪಟ್ಟ ಪೀಠ, ಜಾಮೀನು ನಿರಾಕರಿಸಿದೆ.

ಏಳನೇ ಆರೋಪಿ ಚಂದ್ರಮೋಹನ್ ಮತ್ತು ಎಂಟನೇ ಆರೋಪಿ ಜಗದೀಶ್ ಅವರು ಒಂದು ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಭದ್ರತೆ ಒದಗಿಸಬೇಕು. ವಿಚಾರಣಾಧೀನ ನ್ಯಾಯಾಲಯ ವಿನಾಯಿತಿ ಕಲ್ಪಿಸದ ಹೊರತು ವಿಚಾರಣೆಯ ಎಲ್ಲಾ ದಿನ ನ್ಯಾಯಾಲಯದಲ್ಲಿ ಹಾಜರಾಗಬೇಕು. ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ತಿರುಚಬಾರದು. ಇಂತದ್ದೇ ಅಪರಾಧದಲ್ಲಿ ಭಾಗಿಯಾಗಬಾರದು ಹಾಗೂ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯದ ಅನುಮತಿ ಇಲ್ಲದೇ ವ್ಯಾಪ್ತಿ ತೊರೆಯುವಂತಿಲ್ಲ ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.

ಇದನ್ನೂ ಓದಿ:ವಾಲ್ಮೀಕಿ ನಿಗಮದ ಹಗರಣ: ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ

ABOUT THE AUTHOR

...view details