ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ ಸಂಬಂಧ ಪೊಲೀಸ್ ತನಿಖೆ ಎದುರಿಸಿದ್ದ ವಕೀಲೆ ಎಸ್.ಜೀವಾ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ಸಿಬಿಐ ಇಲ್ಲವೇ, ಸ್ವತಂತ್ರ್ಯ ತನಿಖಾ ಸಂಸ್ಥೆಗೆ ಒಪ್ಪಿಸಬೇಕು ಎಂದು ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.
ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತಮ್ಮ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ವಕೀಲೆ ಎಸ್.ಜೀವಾ ಸಲ್ಲಿಸಿರುವ ಅರ್ಜಿ ಹಾಗೂ ಜೀವಾ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎನ್ನಲಾದ ತನಿಖಾಧಿಕಾರಿಯೂ ಆಗಿರುವ ಡಿವೈಎಸ್‌ಪಿ ಕನಕಲಕ್ಷ್ಮಿ ಮತ್ತಿತರರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಅಲ್ಲದೆ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಗೆ ತನಿಖೆಗೆ ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಸಿಬಿಐ ಅನ್ನು ಪ್ರತಿವಾದಿಗಳನ್ನಾಗಿಸಲು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಪುರಸ್ಕರಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಲಾಗಿದೆ. ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಯಾರು ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಆದೇಶ ಪ್ರಕಟಿಸಲಾಗುವುದು ಎಂದು ತಿಳಿಸಿತು.
ವಕೀಲರ ಸಂಘದ ವಾದವೇನು?:ವಿಚಾರಣೆ ವೇಳೆ ಬೆಂಗಳೂರು ವಕೀಲರ ಸಂಘದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲರಾದ ಡಿ.ಆರ್.ರವಿಶಂಕರ್ ಮತ್ತು ವಿವೇಕ್ ಸುಬ್ಬಾರೆಡ್ಡಿ, ''ಬೆಂಗಳೂರು ಜಿಲ್ಲೆಯ ವಕೀಲರ ಕಲ್ಯಾಣಕ್ಕಾಗಿ ಎಎಬಿ ಇದೆ. ವಕೀಲೆ ಜೀವಾ ಅವರು ಸಿವಿಲ್ ನ್ಯಾಯಾಧೀಶರ ಪರೀಕ್ಷೆ ಬರೆದಿದ್ದು, ಭಾರತೀಯ ವಕೀಲರ ಪರಿಷತ್ ಸದಸ್ಯತ್ವ ಹೊಂದಿದ್ದಾರೆ. ಎಐಬಿಇ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹಾಲಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಕನಕಲಕ್ಷ್ಮಿ ಅವರು ತುಮಕೂರಿನಲ್ಲಿ ಪ್ರಕರಣದ ತನಿಖಾಧಿಕಾರಿಯಾಗಿದ್ದಾಗ ತನಿಖಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದರು''.
''ಇದಕ್ಕಾಗಿ ಅವರ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಕನಕಲಕ್ಷ್ಮಿ ಅವರ ಪರವಾಗಿ ಬಿ ವರದಿ ಸಲ್ಲಿಕೆಯಾಗಿತ್ತು. ಇದರ ಬೆನ್ನಿಗೇ ಅವರು ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ಧತಿ ಕೋರಿದ್ದು, ಅದನ್ನು ಹೈಕೋರ್ಟ್ ವಜಾ ಮಾಡಿದೆ. ಮತ್ತೆರಡು ಪ್ರಕರಣಳಲ್ಲಿಯೂ ಕನಕಲಕ್ಷ್ಮಿ ಪರವಾಗಿ ಬಿ ವರದಿ ಸಲ್ಲಿಕೆಯಾಗಿದೆ. ಜೀವಾ ಆತ್ಮಹತ್ಯೆ ತನಿಖೆಗೆ ರಾಜ್ಯ ಸರ್ಕಾರವು ಎಸ್‌ಐಟಿ ರಚಿಸುವ ಭರವಸೆ ನೀಡುತ್ತಿದ್ದು, ಅದರಿಂದ ನ್ಯಾಯ ನಿರೀಕ್ಷಿಸಲಾಗದು. ಹೀಗಾಗಿ, ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರುತ್ತಿದ್ದೇವೆ'' ಎಂದು ಪೀಠಕ್ಕೆ ವಿವರಿಸಿದರು.