ಬಂಟ್ವಾಳ (ದಕ್ಷಿಣ ಕನ್ನಡ):ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ 87ರ ಹರೆಯದ ಬಿ. ಜನಾರ್ದನ ಪೂಜಾರಿ ಅವರು ಬಂಟ್ವಾಳದಲ್ಲಿರುವ ತಮ್ಮ ಮನೆಯಲ್ಲಿಯೇ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತಗಟ್ಟೆ ಅಧಿಕಾರಿಗಳ ತಂಡದವರು 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷಚೇತನರ ಮನೆಗಳಿಗೆ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದೆ.
ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡವು ಮನೆ ಮನೆಗಳಿಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಏಪ್ರಿಲ್ 15 ರಂದು ಆರಂಭಗೊಂಡಿದೆ.