ಸುಬ್ರಹ್ಮಣ್ಯ:ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಿಂದೂಯೇತರ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ವಿಎಚ್‌ಪಿ ಹಾಗೂ ಹಿಂದೂ ಪರ ಸಂಘಟನೆಗಳು ಆರೋಪಿಸಿದ್ದವು. ಆದರೆ, ಆ ಆರೋಪವನ್ನು ಅಲ್ಲಗಳೆದಿರುವ ರಾಜ್ಯ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು, ಇದು ಬಿಜೆಪಿ ಹರಡಿಸುತ್ತಿರುವ ಸುಳ್ಳು ಸುದ್ದಿ ಎಂದು ತನ್ನ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ದೇಗುಲದ ನೂತನ ಎಇಒ ಆಗಿ ಏಸುರಾಜ್ ಎಂಬವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆ ಆರಂಭವಾಗಿತ್ತು. ಏಸುರಾಜ್ ಹಿಂದೂವೇ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್ನರೇ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು. ಏಸುರಾಜ್ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ವಿಎಚ್‌ಪಿ ಸಂದೇಶ ಪ್ರಕಟಿಸಿತ್ತು.
ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು?:ಏಸುರಾಜ್ ಅಧಿಕಾರ ಸ್ವೀಕಾರ ಗೊಂದಲದ ಬಗ್ಗೆ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ ರಾಮಲಿಂಗಾ ರೆಡ್ಡಿ ಅವರು, ''ಇದು ಬಿಜೆಪಿಯ ಮತ್ತೊಂದು ಫೇಕ್ ವಾಟ್ಸ್ಆ್ಯಪ್ ಯುನಿವರ್ಸಿಟಿಯ ಸುಳ್ಳು ಸುದ್ದಿ ಎಂದು ಟೀಕಿಸಿದ್ದಾರೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಎಇಒ ಏಸುರಾಜ್ ಅವರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿರುವವರೆಂದು ಬಿಜೆಪಿಯವರು ವ್ಯಾಪಕವಾಗಿ ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ. ಇದು ಕರ್ನಾಟಕ ಬಿಜೆಪಿಯ ಮತ್ತೊಂದು ಸುಳ್ಳು ಹಬ್ಬಿಸುವ ಸೋಷಿಯಲ್ ಮೀಡಿಯಾ ವಾಟ್ಸ್ ಆ್ಯಪ್ ಫೇಕ್ ಯುನಿವರ್ಸಿಟಿಯ ಆಟವಾಗಿದೆ. ಅವರು ಹಿಂದುಳಿದ ಜಾತಿಗೆ ಸೇರಿದವರಾಗಿದ್ದು, ದಾಖಲೆಗಳು ಇಲ್ಲಿವೆ ಎಂದು ದಾಖಲೆಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಕನಿಷ್ಠ ವೇತನ ಕಾಯಿದೆ ಉಲ್ಲಂಘನೆ ಆರೋಪದಲ್ಲಿ ಕಂಪೆನಿಯನ್ನು ಪ್ರತಿವಾದಿ ಮಾಡಬಹುದು: ಹೈಕೋರ್ಟ್ - High Court