ಉಡುಪಿ: ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ನಕಲಿ ಅಲ್ಲ. ಎನ್ಕೌಂಟರ್ ನಕಲಿ ಅಂತ ಅನುಮಾನ ಪಡುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎನ್ಕೌಂಟರ್ ಕುರಿತು ನ್ಯಾಯಾಂಗ ತನಿಖೆಯ ಅವಶ್ಯಕತೆ ಇಲ್ಲ. ಅಗತ್ಯವಿದ್ದರೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು. ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ವಿಕ್ರಂಗೌಡ ವಿರುದ್ಧ ಹಲವು ಪ್ರಕರಣಗಳು ಇದ್ದವು. ನಕ್ಸಲಿಸಂ ಅನ್ನು ಬೇರು ಸಮೇತ ಕಿತ್ತುಹಾಕಬೇಕು. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿಲುವು ಎಂದರು.
ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಎನ್ಕೌಂಟರ್ ನಡೆದಿದೆ. ವಿಕ್ರಂಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳು ಇದ್ದವು. ವಿಕ್ರಂಗೌಡ ಫೈರಿಂಗ್ ಮಾಡಿದ ವೇಳೆ ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವಕ್ಕೆ ಹಾನಿ ಆಗುತ್ತಿತ್ತು. ಪರ - ವಿರೋಧ ಚರ್ಚೆ ಎಲ್ಲ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯ ಇದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ನಲ್ಲಿ ಭಿನ್ನಮತ ಇಲ್ಲ:ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ಪ್ರತಿದಿನ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಹೇಳಿದರು.