ಬೆಳಗಾವಿ: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಎಂಬ ಘೋಷವಾಕ್ಯ ಇರುವ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಅಳವಡಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ಜಿಲೇಬಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.
ಬೆಳಗಾವಿಯ ಬಸವಮಂಟಪದ ಮುಂಭಾಗದಲ್ಲಿ ರಾಷ್ಟ್ರೀಯ ಬಸವದಳ, ಕ್ರಾಂತಿ ಗಂಗೋತ್ರಿ ಅಕ್ಕನಾಗಲಾಂಬಿಕಾ ಮಹಿಳಾ ಗಣ ಜಿಲ್ಲಾ ಘಟಕ ಹಾಗೂ ವಿವಿಧ ಬಸವಪರ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸವಣ್ಣನವರ ಪುತ್ಥಳಿಗೆ ಸ್ವಾಮೀಜಿಗಳು ಹಾಗೂ ಗಣ್ಯರು ಪುಷ್ಪವೃಷ್ಟಿ ಮಾಡಿ, ಜಯಘೋಷ ಮೊಳಗಿಸಿ ಗೌರವ ಸಮರ್ಪಿಸಿದರು. ಬಳಿಕ ಪಟಾಕಿ ಸಿಡಿಸಿದ ಬಸವಾಭಿಮಾನಿಗಳು ಬಸ್, ಕಾರು, ಬೈಕ್ಗಳಲ್ಲಿ ತೆರಳುತ್ತಿದ್ದ ಸಾರ್ವಜನಿಕರಿಗೆ ಜಿಲೇಬಿ ವಿತರಿಸಿ ಸಂಭ್ರಮಿಸಿದರು.
ಬಸವಬೆಳವಿಯ ಬಸವಚೇತನ ಸ್ವಾಮೀಜಿ ಮಾಧ್ಯಮಗಳ ಜೊತೆಗೆ ಮಾತನಾಡಿ, "ಪಶ್ಚಿಮ ಬಂಗಾಳದಲ್ಲಿ ಸ್ವಾಮಿ ವಿವೇಕಾನಂದ, ತಮಿಳುನಾಡಿನಲ್ಲಿ ಪೆರಿಯಾರ್ ರಾಮಸ್ವಾಮಿ, ಮಹಾರಾಷ್ಟ್ರದಲ್ಲಿ ಶಿವಾಜಿ ಮಹಾರಾಜರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಅಲ್ಲಿನ ಸರ್ಕಾರಗಳು ಘೋಷಿಸಿದಂತೆ ಕರ್ನಾಟಕದಲ್ಲಿ ಬಸವಣ್ಣನವರನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದು ಸಮಸ್ತ ಕನ್ನಡಿಗರ ಅಸ್ಮಿತೆಯಾಗಿದೆ. ಹಾಗಾಗಿ, ಇಂದು ಸಿಹಿ ಹಂಚಿ ಸಂಭ್ರಮಿಸಲಾಗುತ್ತಿದೆ" ಎಂದು ಹರ್ಷ ವ್ಯಕ್ತಪಡಿಸಿದರು.
ಲಿಂಗಾಯತ ಮುಖಂಡ ಶಂಕರ ಗುಡಸ ಮಾತನಾಡಿ, "ಸರ್ಕಾರಿ ಕಚೇರಿ ಮತ್ತು ಶಾಲೆಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಕೆಗೆ ಆದೇಶ ಹೊರಡಿಸಿರುವುದು ಇಡೀ ಕರುನಾಡಿಗೆ ಅಭಿಮಾನ ಮತ್ತು ಹೆಮ್ಮೆಯ ಸಂಗತಿ. ಇಂದು ಬರೋಬ್ಬರಿ ಒಂದು ಕ್ವಿಂಟಾಲ್ ಜಿಲೇಬಿ ಹಂಚಿ ವಿಜಯೋತ್ಸವ ಆಚರಿಸುತ್ತಿದ್ದೇವೆ. ಕೆಲವೇ ದಿನಗಳಲ್ಲಿ ಬೆಳಗಾವಿಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಕರ್ನಾಟಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲಾಗುವುದು" ಎಂದರು.