ಬೆಂಗಳೂರು: ಮುಖ್ಯಮಂತ್ರಿಗಳ ಆದೇಶವಿದ್ದರೂ ಮೇಲಾಧಿಕಾರಿಗಳ ಅನುಮತಿ ಇಲ್ಲದೆ ವಕ್ಫ್ ಆಸ್ತಿ ಖಾತೆ ಬದಲಾವಣೆಯ ಬಗ್ಗೆ ಕೈಗೊಂಡಿರುವ ಅನುಪಾಲನಾ ವರದಿ ಸಲ್ಲಿಸುವಂತೆ ಕೋರಿ ನೆನಪೋಲೆ ಹೊರಡಿಸಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕಂದಾಯ ಇಲಾಖೆ ಪ್ರದಾನ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
ನ.7ರಂದು ನೆನಪೋಲೆ ಹೊರಡಿಸಿದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಾಜ್ಯಮಟ್ಟದ ವಕ್ಫ್ ಆಸ್ತಿಗಳ ಕಾರ್ಯಪಡೆಯ ಪ್ರಕಾರ್ಯಗಳಲ್ಲಿ ಸಾಧಿಸಿದ ಪ್ರಗತಿಯ ನಾಲ್ಕನೇ ವರಿಶೀಲನಾ ಸಭೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಖಾತೆ ಬದಲಾವಣೆಗೆ ಬಾಕಿಯಿರುವ ಒಟ್ಟು 21,767 ಪ್ರಕರಣಗಳಲ್ಲಿ ಅಗತ್ಯ ಕ್ರಮ ವಹಿಸಿ, ಅನುಪಾಲನಾ ವರದಿಯನ್ನು ತುರ್ತಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಕೋರಲಾಗಿತ್ತು. ಆದರೆ, ಈ ಕುರಿತು ಈವರೆಗೂ ಯಾವುದೇ ಮಾಹಿತಿ ಸ್ವೀಕೃತವಾಗಿರುವುದಿಲ್ಲ. ಆದ್ದರಿಂದ, ವಕ್ಫ್ ಆಸ್ತಿಗಳ ಖಾತೆ ಬದಲಾವಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ಕೈಗೊಂಡ ಕ್ರಮದ ಅನುಪಾಲನಾ ವರದಿಯನ್ನು ಸರ್ಕಾರಕ್ಕೆ, ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಕೋರಿದ್ದರು.
ವಕ್ಫ್ ನೋಟಿಸ್ ವಿರುದ್ಧ ಆಕ್ರೋಶದ ಮಧ್ಯೆ ಈ ನೆನಪಿನೋಲೆ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಎಚ್ಚೆತ್ತುಕೊಂಡ ಸರ್ಕಾರ ಇದೀಗ ಡ್ಯಾಮೇಜ್ ಕಂಟ್ರೊಲ್ಗೆ ಮುಂದಾಗಿದೆ. ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಖಡಕ್ ಸೂಚನೆ ನೀಡಿದ್ದಾರೆ. ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಕೆಲ ಸೂಚನೆ ನೀಡಿದ್ದಾರೆ. ಅದರಂತೆ ಮ್ಯುಟೇಷನ್ ಮಾಡಲು ಯಾವುದೇ ಕಚೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮ್ಯುಟೇಷನ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವುದು, ಈ ಕುರಿತು ನೀಡಲಾದ ಎಲ್ಲಾ ನೋಟಿಸ್ಗಳನ್ನು ಹಿಂಪಡೆಯುವುದು ಮತ್ತು ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ ಎಂದು ನಿರ್ದೇಶನ ನೀಡಿದೆ.