ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ 100 ಎಕರೆ ಪ್ರದೇಶದಲ್ಲಿ ಬೃಹತ್ ತ್ಯಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಘಟಕ ಪ್ರಾರಂಭಿಸುತ್ತಿರುವುದಾಗಿ ಹೈಕೋರ್ಟ್‌ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಹಿತಿ ನೀಡಿದೆ. ಬೆಂಗಳೂರಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2012ರಲ್ಲಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದರು. ಅಲ್ಲದೆ, ನಗರದ ನಾಲ್ಕು ದಿಕ್ಕುಗಳಲ್ಲಿ ಬೃಹತ್ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ವಿಚಾರಣೆಯ ವೇಳೆ ಅರ್ಜಿದಾರರ ಪರ ವಕೀಲ, ಚೆನ್ನೈನಲ್ಲಿ ಕ್ವಾರಿಯಿಂದಾದ ಹಳ್ಳದಲ್ಲಿ ಕುಡಿಯುವ ನೀರು ಸಂಗ್ರಹಿಸುತ್ತಾರೆ. ಆದರೆ ನಮ್ಮಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳು ಮಾಡಲಾಗುತ್ತಿದೆ ಎಂದು ವಿವರಿಸಿದರು. ಸರ್ಕಾರಿ ಪರ ವಕೀಲರು ವಾದ ಮಂಡಿಸಿ, ತ್ಯಾಜ್ಯ ಹಾಗೂ ವಿಲೇವಾರಿ ಸಮರ್ಪಕವಾಗಿ ನಿರ್ವಹಿಸುವಂತೆ ನಗರದ ನಾಲ್ಕು ದಿಕ್ಕಿನಲ್ಲಿ ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು. ಘಟಕ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕತೆ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಕಾಲಾವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.
ಈ ವೇಳೆ ಪೀಠ, ಎಷ್ಟು ವರ್ಷಗಳಿಂದ ಈ ಪ್ರಕರಣ ಬಾಕಿ ಉಳಿದಿದೆ? ಬಿಬಿಎಂಪಿ ಈ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಂಡು ಆದಷ್ಟು ಬೇಗ ಇತ್ಯರ್ಥಪಡಿಸಿಕೊಳ್ಳಬೇಕೆಂದು ಹೇಳಿ ವಿಚಾರಣೆ ಮುಂದೂಡಿದೆ.