ಶಿವಮೊಗ್ಗ: "ಭದ್ರಾ ಎಡದಂಡೆ ನಾಲೆಯ ರೈತರ ಅನುಕೂಲಕ್ಕಾಗಿ ಇಂದಿನಿಂದಲೇ ಅನ್ವಯವಾಗುವಂತೆ ಮುಂದಿನ 120 ದಿನಗಳ ಕಾಲ ನಿರಂತರವಾಗಿ ನೀರು ಹರಿಸಲು ನಿರ್ಣಯ ಕೈಗೊಳ್ಳಲಾಗಿದೆ" ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ಅಧ್ಯಕ್ಷ ಡಾ. ಅಂಶುಮಂತ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಶನಿವಾರ ಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿಯ ಚುನಾಯಿತ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ರೈತ ಮುಖಂಡರುಗಳ ಉಪಸ್ಥಿತಿಯಲ್ಲಿ ಆನ್ಲೈನ್ನಲ್ಲಿ ಸಭೆ ನಡೆಸಿ, ರೈತರ ಹಿತ ಕಾಯುವ ನಿರ್ಣಯಗಳನ್ನು ಕೈಗೊಳ್ಳಲಾಗಿದೆ" ಎಂದು ತಿಳಿಸಿದರು.
"ಭದ್ರಾ ಎಡದಂಡೆ ನಾಲೆಗೆ ಇಂದು ರಾತ್ರಿಯಿಂದಲೇ ಹಾಗೂ ಜ.8 ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120 ದಿನಗಳ ಕಾಲ ನೀರು ಹರಿಸಲಾಗುವುದು. ಈಗಾಗಲೇ ಈ ಸಂಬಂಧ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ಹಾಗೂ ದಾವಣಗೆರೆ ಜಿಲ್ಲೆಗಳ ರೈತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು" ಎಂದು ಮನವಿ ಮಾಡಿದರು.