ಬೆಂಗಳೂರು:ಮುಂದಿನ ತಿಂಗಳು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಸಭೆಯಲ್ಲಿ ಪರಿಷತ್ ಚುನಾವಣೆಯ ಅಭ್ಯರ್ಥಿಗಳು, ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು. ಸಚಿವರಾದ ಕೆ.ಎನ್. ರಾಜಣ್ಣ, ಮಧು ಬಂಗಾರಪ್ಪ, ಮುಖಂಡರಾದ ತನ್ವಿರ್ ಸೇಠ್, ಜಿ.ಸಿ. ಚಂದ್ರಶೇಖರ್, ಪುಟ್ಟಣ್ಣ, ಬೇಳೂರು ಗೋಪಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಮಾತನಾಡಿದ ಡಿಸಿಎಂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ''ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲ ಮುಖಂಡರೂ ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ'' ಎಂದು ತಿಳಿಸಿದರು. ಲೋಕಸಭೆ ಮಾದರಿಯಲ್ಲೇ ಚುನಾವಣೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ''ಹೌದು, ಲೋಕಸಭೆ ಚುನಾವಣೆ ಮಾದರಿಯಲ್ಲಿ ಈ ಚುನಾವಣೆ ಎದುರಿಸುತ್ತೇವೆ'' ಎಂದರು.