ಬೆಂಗಳೂರು:ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ, ದೆಹಲಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಚುನಾವಣಾ ಸಮಿತಿ ಸಭೆಯ ನಂತರ ಅವರು ಮಾತನಾಡಿದರು.
ದೆಹಲಿಯಲ್ಲಿ ಮುಂದಿನ ಸಭೆ: ಇಂದಿನ ಸಭೆಯಲ್ಲಿ ಪಕ್ಷದ ವೀಕ್ಷಕರು, ಜಿಲ್ಲಾ ಮಂತ್ರಿಗಳು, ಕೆಲವು ಕಾರ್ಯಕರ್ತರು ಸಲ್ಲಿಸಿದ್ದ ವರದಿ ಹಾಗೂ ನಮ್ಮ ಸಮೀಕ್ಷೆ ವರದಿಗಳನ್ನು ಪರಾಮರ್ಶಿಸಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆಯ ಮೂಲಕ ಅಭಿಪ್ರಾಯ ಸಂಗ್ರಹಿಸಲು ಸೂಚಿಸಿದ್ದೇವೆ. ಪಕ್ಷದ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮವಾಗಿಲ್ಲ. ಮುಂದಿನ ಸುತ್ತಿನ ಸಭೆಯನ್ನು ದೆಹಲಿಯಲ್ಲಿ ನಡೆಸಲಾಗುವುದು. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರಿನಲ್ಲೇ ಸಭೆ ಮಾಡಲಾಗಿದೆ ಎಂದರು.
ಈ ತಿಂಗಳೊಳಗಾಗಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆಯೇ ಎಂಬ ಪ್ರಶ್ನೆಗೆ, ಆದಷ್ಟು ಬೇಗ ಅಂತಿಮಗೊಳಿಸಬೇಕು. ಶೇ.50ರಷ್ಟು ಅಭ್ಯರ್ಥಿಗಳಿಗಾದರೂ ಕೆಲಸ ಆರಂಭಿಸಲು ನಾವು ಸೂಚನೆ ನೀಡಬೇಕಿದೆ ಎಂದು ತಿಳಿಸಿದರು.
ಎಷ್ಟು ಕ್ಷೇತ್ರಗಳಲ್ಲಿ ಓರ್ವ ಆಕಾಂಕ್ಷಿಗಳಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯಿಸಿ, ನಾವು ಇನ್ನು ಆ ವಿಚಾರವಾಗಿ ಚರ್ಚೆ ಮಾಡಿಲ್ಲ. ನಾವು ಕೇವಲ ನಮಗೆ ಬಂದಿರುವ ವರದಿಗಳು, ಅಭಿಪ್ರಾಯಗಳ ಬಗ್ಗೆ ಚರ್ಚಿಸಿದ್ದೇವೆ ಎಂದರು.