ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊನೆಗೊಳ್ಳಲು ಇನ್ನೊಂದು ದಿನ ಬಾಕಿ ಉಳಿದಿದೆ. ಕೆಲವೆಡೆ ಮಳೆ ಮುಂದುವರೆದಿದ್ದು, ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.