ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಪ್ರತಿಭಟನೆ - ನೇರ ಪ್ರಸಾರ
Published : Feb 7, 2024, 11:26 AM IST
|Updated : Feb 7, 2024, 11:52 AM IST
ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆದಿದ್ದು, ಈ ಹೋರಾಟದಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದಾರೆ.
ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ 'ನಮ್ಮ ತೆರಿಗೆ ನಮ್ಮ ಹಕ್ಕು' ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಇತ್ತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ರಾಜ್ಯದ ಶಕ್ತಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದೆ. ಹಾಗೆಯೇ ಸಂಸತ್ತಿನ ಬಳಿ ಗಾಂಧಿ ಪ್ರತಿಮೆ ಮುಂದೆ ರಾಜ್ಯ ಬಿಜೆಪಿ ಸಂಸದರು ಇಂದು ಪ್ರತಿಭಟನೆ ನಡೆಸಿದರು.
'ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ' ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.