ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪ್ರತಿಭಟನೆ : ನೇರ ಪ್ರಸಾರ - ಕರ್ನಾಟಕ ಸಿಎಂ ಸಿದ್ದರಾಮಯ್ಯ
Published : Feb 7, 2024, 11:42 AM IST
|Updated : Feb 7, 2024, 12:51 PM IST
ನವದೆಹಲಿ: ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ದೆಹಲಿ ಜಂತರ್ ಮಂತರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿಭಟನೆಗೆ ಕೈಗೊಂಡಿದೆ. ಡಿಸಿಎಂ ಡಿಕೆಶಿ, ರಾಜ್ಯ ಸಚಿವ ಸಂಪುಟ ಸದಸ್ಯರು, ಶಾಸಕರಾದಿಯಾಗಿ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ.
ನಮ್ಮ ತೆರಿಗೆ ನಮ್ಮ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರ ನೀಡುವ ಅನುದಾನದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಈ ವಿಚಾರವನ್ನು ಜನರಿಗೆ ಮನದಟ್ಟು ಮಾಡಿಕೊಟ್ಟು, ಕೇಂದ್ರ ಹಾಗೂ ದೇಶದ ಜನರ ಗಮನ ಸೆಳೆಯಲು ರಾಜಕೀಯ ರಹಿತ ಪ್ರತಿಭಟನೆ ಎಂಬ ಸಂದೇಶದೊಂದಿಗೆ ದೆಹಲಿ ಅಂಗಳಕ್ಕೆ ಕಾಂಗ್ರೆಸ್ ಸರ್ಕಾರ ಧುಮುಕಿದೆ. ಇದು ಬಿಜೆಪಿ ವಿರುದ್ಧದ ಪ್ರತಿಭಟನೆ ಅಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕೋರಿ ರಾಜ್ಯದ ಬಿಜೆಪಿ, ಜೆಡಿಎಸ್ ಸಂಸದರಿಗೆ ಹಾಗೂ ರಾಜ್ಯ ಪ್ರತಿನಿಧಿಸುವ ಸಚಿವರುಗಳಿಗೂ ಖುದ್ದು ಪತ್ರ ಬರೆದು ಮನವಿ ಮಾಡಿದ್ದಾರೆ.
ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್ ಖೂಬಾ, ನಾರಾಯಣ ಸ್ವಾಮಿ ಸೇರಿ ಬಿಜೆಪಿ ಸಂಸದರಿಗೂ ಪತ್ರ ಬರೆದು ಆಹ್ವಾನ ನೀಡಿದ್ದಾರೆ. ಆ ಮೂಲಕ ಇದು ಕರ್ನಾಟಕದ ಹಿತದೃಷ್ಟಿಯಿಂದ ಕನ್ನಡಿಗರ ಮೇಲಿನ ಆರ್ಥಿಕ ದೌರ್ಜನ್ಯದ ವಿರುದ್ಧದ ಪಕ್ಷಾತೀತ ಹೋರಾಟ ಎಂದು ಬಿಂಬಿಸಲು ಮುಂದಾಗಿದ್ದಾರೆ.