ಶಿವಮೊಗ್ಗ:15 ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 23 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ-1 ಕೋರ್ಟ್ ಆದೇಶಿಸಿದೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಾರಾಗೃಹ ಶಿಕ್ಷೆ
Published : Jun 21, 2024, 9:08 AM IST
2023ರಲ್ಲಿ ಶಿಕಾರಿಪುರ ತಾಲೂಕಿನ ಯುವಕನೋರ್ವ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಬಗ್ಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.
ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಲತಾ ಅವರು ಗುರುವಾರ ಯುವಕನಿಗೆ 20 ವರ್ಷ ಕಠಿಣ ಸೆರೆವಾಸ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದರೆ 4 ತಿಂಗಳು ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 45 ಸಾವಿರ ರೂ. ಹಾಗೂ ಸರ್ಕಾರದ ವತಿಯಿಂದ 7 ಲಕ್ಷ ರೂ. ನೀಡುವಂತೆ ಆದೇಶಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಎಸ್.ಹರಿಪ್ರಸಾದ್ ವಾದ ಮಂಡಿಸಿದ್ದರು.