ಮುಂಬೈ: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಮೇಲೆ ಭಯೋತ್ಪಾದಕ ದಾಳಿ ನಡೆದು ಇಂದಿಗೆ 12 ವರ್ಷವಾಗಿಿದ್ದು, ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲು ನಗರ ಪೊಲೀಸರು ಕಾರ್ಯಕ್ರಮ ಆಯೋಜಿಸಿದ್ದಾರೆ.
ದಕ್ಷಿಣ ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಲಾದ ಸ್ಮಾರಕವೊಂದರಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದ್ದು, ಕೊರೊನಾ ಸೋಂಕಿನ ಕಾರಣಕ್ಕೆ ಕಡಿಮೆ ಮಂದಿ ಭಾಗವಹಿಸಲಿದ್ದಾರೆ.
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್ಮುಖ್, ಡಿಜಿಪಿ ಸುಬೋಧ್ ಕುಮಾರ್ ಜೈಸ್ವಾಲ್, ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು ಹುತಾತ್ಮರಿಗೆ ಗೌರವ ಸಲ್ಲಿಸಲಿದ್ದಾರೆ.
ನವೆಂಬರ್ 26, 2008ರಂದು ಪಾಕಿಸ್ತಾನದಿಂದ ಹತ್ತು ಮಂದಿ ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರು ಸಮುದ್ರ ಮಾರ್ಗವಾಗಿ ಬಂದು ಮುಂಬೈ ಮೇಲೆ ದಾಳಿ ಮಾಡಿದ್ದರು. ಈ ದಾಳಿಯಲ್ಲಿ 18 ಮಂದಿ ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಸಾವನ್ನಪ್ಪಿದರು.
ಭದ್ರತಾ ಪಡೆ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ 9 ಮಂದಿ ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಉಗ್ರ ಅಜ್ಮಲ್ ಅಮಿರ್ ಕಸಬ್ನನ್ನು ಸೆರೆ ಹಿಡಿದು ನವೆಂಬರ್ 21, 2012ರಲ್ಲಿ ಗಲ್ಲಿಗೇರಿಸಲಾಗಿತ್ತು.