ಅಹಮದ್ನಗರ(ಮಹಾರಾಷ್ಟ್ರ): ಇಲ್ಲಿನ ಜವಾಹರ್ ನವೋದಯ ವಿದ್ಯಾಲಯದ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. 16 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಿಗೆ ಕೋವಿಡ್ ವಕ್ಕರಿಸಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಆತಂಕ ಹೆಚ್ಚಿದೆ.
ಸೋಂಕಿತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಐಸೋಲೇಷನ್ ವಾರ್ಡ್ಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಭೋಸಲೆ, ಇದು ವಸತಿ ಶಾಲೆಯಾಗಿದ್ದು, 450 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. 16 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಇದೀಗ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ, ಅಡುಗೆಯವರು ಸೇರಿದಂತೆ ಸೋಂಕಿತರ ಜೊತೆ ಸಂಪರ್ಕ ಹೊಂದಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ, RTPCR ಟೆಸ್ಟ್ ಮಾಡಲಾಗುತ್ತಿದೆ ಎಂದರು.
ಸೋಂಕಿತರನ್ನು ಪಾರ್ನರ್‌ನ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಎಲ್ಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮತ್ತೊಂದೆಡೆ, ಜಿಲ್ಲೆಯ ಶ್ರೀರಾಂಪುರದ ಮೂವರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದ್ದು, ಜಿಲ್ಲಾಡಳಿತ ಹೆಚ್ಚಿನ ನಿಗಾ ವಹಿಸಿದೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಸಿಕೆ ಹಾಕಿಸಿಕೊಳ್ಳದವರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.