ನವದೆಹಲಿ : ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಮುಂದುವರೆದಿದೆ. ಜುಲೈ 22ರಿಂದ ಪಾರ್ಲಿಮೆಂಟ್ನ ಹೊರಗೆ ಸುಮಾರು 200 ರೈತರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ವರ್ಷ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದೇ ವೇಳೆ ಸಂಸತ್ನ ಮಾನ್ಸೂನ್ ಅಧಿವೇಶನ ನಡೆಯುಲಿದೆ.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೃಷಿ ಕಾನೂನುಗಳ ಬಗ್ಗೆ ಕೇಂದ್ರ ಸರ್ಕಾರವು ಚರ್ಚೆಯನ್ನು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಮಾತುಕತೆಗಳು ನಡೆಯದಿದ್ದರೆ ಜುಲೈ 22ರಿಂದ ಸುಮಾರು 200 ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರುವಾರ ಸ್ಪಷ್ಟಪಡಿಸಿದ್ದರು. ಅಷ್ಟೇ ಅಲ್ಲ, ರೈತರೊಂದಿಗೆ ಚರ್ಚೆ ನಡೆಸಲು ಮತ್ತು ಇತರ ಆಯ್ಕೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಯೋಗಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ
ಗಣರಾಜ್ಯೋತ್ಸವದ ವೇಳೆ ಕೆಂಪುಕೋಟೆ ಬಳಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ರಾಕೇಶ್ ಟಿಕಾಯತ್, ಈ ಕುರಿತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದಿದ್ದು, ಆದಷ್ಟು ಬೇಗ ತನಿಖೆ ನಡೆಯಬೇಕೆಂದು ಒತ್ತಾಯಿಸಿದ್ದಾರೆ.