ನವದೆಹಲಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳಿಗೆ ಟಿಕೆಟ್ ಅಂತಿಮಗೊಳಿಸಿದ್ದು, ಜನವರಿ 16 ಅಥವಾ 17 ರೊಳಗೆ 177 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇಂದು ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳಿಂದ ಪಕ್ಷದ ಸಭೆಗಳು ನಡೆಯುತ್ತಿದ್ದು, ಬುಧವಾರ ಬಿಜೆಪಿ ಹೈಕಮಾಂಡ್ ಜೊತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪಕ್ಷದ ಹಿರಿಯ ನಾಯಕರು ಚರ್ಚೆ ನಡೆಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರು ಎಲ್ಲಿಂದ ಸ್ಪರ್ಧಿಸಬೇಕು ಎನ್ನುವುದೇ ಚರ್ಚೆಯ ಪ್ರಮುಖ ಅಂಶವಾಗಿತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಯುಪಿ ಚುನಾವಣೆಗೆ ಕಾಂಗ್ರೆಸ್ ರೆಡಿ: ಉನ್ನಾವೋ ರೇಪ್ ಸಂತ್ರಸ್ತೆಯ ತಾಯಿ ಸೇರಿ ಶೇ.40ರಷ್ಟು ಮಹಿಳೆಯರಿಗೆ ಟಿಕೆಟ್
ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇನ್ನೊಂದೆಡೆ ರಾಜ್ಯದ ಕೆಲ ಬಿಜೆಪಿ ನಾಯಕರು ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಪಕ್ಷಾಂತರವಾದವರು ಮಾಧ್ಯಮಗಳಿಗೆ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ತಿಳಿಸಲಾಗಿದೆ.
ಇಂದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಒಟ್ಟು 403 ವಿಧಾನಸಭೆ ಕ್ಷೇತ್ರಗಳ ಪೈಕಿ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಘೋಷಣೆ ಮಾಡಿದೆ. ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಸೇರಿ ಶೇ. 40ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ.