ಚೆಂಗಲ್ಪಟ್ಟು (ತಮಿಳುನಾಡು): ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿ ಚಕ್ರವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ಚೆಂಗಲ್ಪಟ್ಟುವಿನ ಪೊತ್ತೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಳಗ್ಗ 9ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಟ್ಟಿಪ್ಪರ್ ನಿಯಂತ್ರಣ ತಪ್ಪಿದೆ. ಇದರಿಂದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಿದ್ದು, ಈ ವೇಳೆ, ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಸ್ತೆ ಮಧ್ಯದ ತಡೆಗೋಡೆಗೆ ಡಿಕ್ಕಿಯಾಗಿ ಲಾರಿ ನಿಂತಿದೆ. ಇದರಿಂದ ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಅಪಘಾತದ ಬಗ್ಗೆ ಮಾಹಿತಿ ಪಡೆದ ಗುಡುವಂಚೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರತ್ಯೇಕ ಘಟನೆ - ಲಾರಿ ಪಲ್ಟಿ ಚಾಲಕ, ಕ್ಲೀನರ್ ಬಚಾವ್: ಚಾಮರಾಜನಗರದ ಎಂಡಿ ಲಾಡ್ಜ್ ಬಳಿಯ ತಿರುವಿನಲ್ಲಿ ಲೋಡ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹರಿಯಾಣದಿಂದ ತಮಿಳುನಾಡಿಗೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಹಾಗೂ ಕ್ಲೀನರ್ ಸಮಯ ಪ್ರಜ್ಞೆಯಿಂದ ಹೊರಕ್ಕೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ರಸ್ತೆಯಲ್ಲಿ ಲಾರಿ ಪಲ್ಟಿಯಾದ್ದರಿಂದ ಒಂದು ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು.
ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್: ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿತ್ತು. ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಮಕ್ಕಳನ್ನು ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದು, ಉಳಿದ ಸುಚಿತ್, ಗೌತಮಿ, ಲೇಖನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಆಸ್ಪತ್ರೆಗೆ ಎಎಸ್ಪಿ ಸುರೇಶ್ ಭೇಟಿ ನೀಡಿ ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಮಕ್ಕಳಿಗೆ ಗುದ್ದಿದ ಬಳಿಕೆ ಗೂಡ್ಸ್ ವಾಹನವನ್ನು ಅಲ್ಲೇ ಬಿಟ್ಟು ಚಾಲಕ ತನ್ನ ತಪ್ಪಿಸಿಕೊಂಡಿದ್ದು, ಆತನ ಹುಡುಕಾಟವನ್ನು ಪೊಲೀಸರು ಮಾಡುತ್ತಿದ್ದಾರೆ.
ಇದನ್ನೂ ಓದಿ: ತಿರುವಿನಲ್ಲಿ ಸೋಲಾರ್ ಪ್ಲೇಟ್ ತುಂಬಿದ್ಧ ಲಾರಿ ಪಲ್ಟಿ: ಚಾಲಕ, ಕ್ಲೀನರ್ ಜಸ್ಟ್ ಮಿಸ್