ರಾಯ್ಪುರ: ಒಂದೇ ಕುಟುಂಬದ ಐವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಭನಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಕಮಲೇಶ್ ಸಾಹು ಕುಟುಂಬಸ್ಥರು ಅಂಗಡಿಯೊಂದನ್ನು ನಡೆಸುತ್ತಾ ಜೀವನ ಸಾಗಿಸುತ್ತಿದ್ದರು. ಆದ್ರೆ ಇಂದು ಬೆಳಗ್ಗೆ ಕಮಲೇಶ್ ಮತ್ತು ಆತನ ಪತ್ನಿ, ತಾಯಿ ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು ಐವರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿವೆ. ಈ ಘಟನೆ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ತಿಳಿಸಿದರು.
ಸುದ್ದಿ ತಿಳಿದ ತಕ್ಷಣವೇ ಅಭನಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಈ ಘಟನೆ ಕುರಿತು ಅಭನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನೆರೆಹೊರೆಯವರನ್ನು ವಿಚಾರಣೆಗೊಳಪಡಿಸಿದ್ದಾರೆ.
ತನಿಖೆಗೆ ಗೃಹ ಸಚಿವರ ಆದೇಶ
ಈ ಸುದ್ದಿ ತಿಳಿಯುತ್ತಿದ್ದಂತೆ ಗೃಹ ಸಚಿವರು ಸಂತಾಪ ಸೂಚಿಸಿದ್ದಾರೆ. ಈ ಘಟನೆ ಬಗ್ಗೆ ಎಸ್ಎಸ್ಪಿ ಅಜಯ್ ಯಾದವ್ ಅವರ ಜೊತೆ ಫೋನ್ ಮೂಲಕ ಮಾಹಿತಿ ಪಡೆದಿದ್ದೇನೆ. ಐವರ ಶವಗಳ ಪತ್ತೆ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದೇನೆ ಎಂದು ಗೃಹ ಸಚಿವ ತಾಮ್ರಧ್ವಜ್ ಸಾಹು ಹೇಳಿದರು.