ಝಾಜ್ಜರ್ (ಹರಿಯಾಣ): ಕೇಂದ್ರ ಸರ್ಕಾರ ಜಾರಿಗೆ ತಂದ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ಅವಿರತ ರೈತರ ಪ್ರತಿಭಟನೆ ಬೆಂಬಲಿಸಿ ವಕೀಲರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಂಜಾಬ್ ಮೂಲದ ಅಮರ್‌ಜಿತ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಕೀಲ ಎಂದು ತಿಳಿದು ಬಂದಿದೆ. ಪ್ರತಿಭಟನಾ ಸ್ಥಳದಿಂದ ಸ್ವಲ್ಪ ದೂರದಲ್ಲಿ ಭಾನುವಾರ ಅಮರ್‌ಜಿತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವುಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪಂಜಾಬ್ ರೈತರ ಹೋರಾಟ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.
ಇದನ್ನೂ ಓದಿ : 30ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ.. ಮತ್ತೆ ಕೇಂದ್ರದ ಪತ್ರ, ಎಂಎಸ್ಪಿ ಕಾನೂನಿಗೆ ನಕಾರ
ಅಮರ್‌ಜಿತ್ ಸಿಂಗ್ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ವಿಷ ಸೇವಿಸಿದ ತಕ್ಷಣ ಅವರನ್ನು ಸ್ಥಳೀಯರು ರೋಹ್ಟಕ್‌ನ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಪಿಜಿಐಎಂಎಸ್) ಕರೆದೊಯ್ದರಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸುವ ಸಲುವಾಗಿ ಹಾಗೂ ಒಗ್ಗಟ್ಟನ್ನು ಪ್ರದರ್ಶಿಸುವ ಸಲುವಾಗಿ ನಾನು ನನ್ನ ಪ್ರಾಣವನ್ನು ತ್ಯಾಗ ಮಾಡುತ್ತಿದ್ದೇನೆ ಎಂದು ಸಿಂಗ್ ಆತ್ಮಹತ್ಯೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಸರ್ಕಾರ ನೂತನ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರಾಷ್ಟ್ರದ ರೈತರನ್ನು ಸಮಸ್ಯೆಗೆ ತಳ್ಳಿದೆ. ಕಾಯ್ದೆ ಖಂಡಿಸಿ ಇಷ್ಟು ಹೋರಾಟ ನಡೆಯುತ್ತಿದ್ದರೂ ಸರ್ಕಾರ ರೈತರ ಸಮಸ್ಯೆಗಳಿಗೆ ಕಿವಿಗೊಡುತ್ತಿಲ್ಲ. ರೈತರಿಂದ ಹಿಡಿದು ಕೂಲಿ ಕಾರ್ಮಿಕರು, ಸಾಮಾನ್ಯ ಜನರು ಕೇಂದ್ರದ ಮೂರು ‘ಕಪ್ಪು’ ಕೃಷಿ ಕಾಯ್ದೆಗಳಿಂದ ವಂಚನೆಗೆ ಒಳಗಾಗುತ್ತಿದ್ದಾರೆ. ದೇಶದ ಜನರ ಧ್ವನಿಯನ್ನು ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ : ಪ್ರಜಾಪ್ರಭುತ್ವವನ್ನು ತೊಡೆದುಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ: ರಾಹುಲ್ ಗಾಂಧಿ
ಡಿಸೆಂಬರ್ 18ರಂದೇ ಅವರು ಈ ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗುತ್ತಿದ್ದು ಪೊಲೀಸರು ಇದರ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದೇವೆ. ಇಲ್ಲಿಗೆ ಬಂದ ಬಳಿಕ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತೇವೆ ಎಂದು ಹರಿಯಾಣ ಝಾಜರ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.