ಲಖನೌ, ಉತ್ತರಪ್ರದೇಶ : ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಅಜಂಗಢದ ಸಂಸದ ಅಖಿಲೇಶ್ ಯಾದವ್ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ಬುಧವಾರ ಮಾಹಿತಿ ನೀಡಿವೆ.
ಈ ಮೂಲಕ ಅವರು ಸಂಸದನ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅದೃಷ್ಟ ಮತ್ತು ಸಾಮರ್ಥ್ಯ ಪರೀಕ್ಷೆ ಮಾಡಿಕೊಳ್ಳವುದು ಖಚಿತವಾಗಿದೆ ಎಂಬ ಮಾತು ಕೇಳಿಬರುತ್ತಿವೆ. ಅಖಿಲೇಶ್ ಯಾದವ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಅಖಿಲೇಶ್ ಯಾದವ್ ಅವರು ಮಧ್ಯಾಹ್ನ 1 ಗಂಟೆಗೆ ಲಖನೌದಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 312 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಉಳಿದ ಪಕ್ಷಗಳನ್ನು ಧೂಳೀಪಟ ಮಾಡಿತ್ತು. ಸಮಾಜವಾದಿ ಪಕ್ಷ 47, ಬಿಎಸ್ಪಿ 19 ಮತ್ತು ಕಾಂಗ್ರೆಸ್ ಕೇವಲ 7 ಕ್ಷೇತ್ರಗಳಲ್ಲಿ ಗೆಲುವು ಕಂಡಿತ್ತು.
ಇನ್ನು ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆ ಮಾರ್ಚ್ 10ರಂದು ನಡೆಯಲಿದೆ.
ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ: ಮುಲಾಯಂ ಸೊಸೆ ಬಿಜೆಪಿ ಸೇರ್ಪಡೆ