ನವದೆಹಲಿ: ಇಂಗ್ಲೆಂಡ್ ಮತ್ತು ಇತರ ಯೂರೋಪಿನ ರಾಷ್ಟ್ರಗಳಲ್ಲಿ ನೂತನ ಕೊರೊನಾ ವೈರಸ್ ಹಾವಳಿಯ ಹೆಚ್ಚಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆ ವಹಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸ್ಪಷ್ಟನೆ ನೀಡಿದರು.
ಅಂತಾರಾಷ್ಟ್ರೀಯ ವಿಜ್ಞಾನ ಉತ್ಸವದ ಉದ್ಘಾಟನಾ ಸಮಾರಂಭದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಸರ್ಕಾರವು ಎಚ್ಚರ ವಹಿಸಿದ್ದು, ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದರು.
ಕೆಲವು ದಿನಗಳ ಹಿಂದಷ್ಟೇ ಇಂಗ್ಲೆಂಡ್ನ ಆರೋಗ್ಯ ಕಾರ್ಯದರ್ಶಿ ಮ್ಯಾಟ್ ಹ್ಯಾನ್ಕಾಟ್ ತಮ್ಮ ದೇಶದಲ್ಲಿ ಹೊಸ ಕೊರೊನಾ ವೈರಸ್ನ ಹಾವಳಿ ಹೆಚ್ಚಿದೆ ಎಂದು ಹೇಳಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವರು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಕೋವಿಡ್ ಲಸಿಕೆಯ ಗುಣಮಟ್ಟ, ಪರಿಣಾಮ ವಿಚಾರದಲ್ಲಿ ರಾಜಿ ಇಲ್ಲ: ಕೇಂದ್ರ ಸಚಿವ ಡಾ.ಹರ್ಷವರ್ಧನ್
ಇಂಗ್ಲೆಂಡ್ನಲ್ಲಿ ಕೊರೊನಾ ವೈರಸ್ ವ್ಯಾಪಿಸುತ್ತಿದ್ದಂತೆ ಯೂರೋಪಿನ ಹಲವಾರು ರಾಷ್ಟ್ರಗಳು ಹೊಸ ಕೊರೊನಾ ವೈರಸ್ ಭೀತಿಯಿಂದಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಇಂಗ್ಲೆಂಡ್ನಿಂದ ಬರುವ ವಿಮಾನಗಳಿಗೆ ನಿರ್ಬಂಧ ಹೇರಲಾಗಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.
ನೆದರ್ಲ್ಯಾಂಡ್ ಸರ್ಕಾರ ಭಾನುವಾರ ಬೆಳಗ್ಗೆಯಿಂದ ಇಂಗ್ಲೆಂಡ್ನಿಂದ ಬರುವ ವಿಮಾನಗಳಿಗೆ ನಿರ್ಬಂಧ ಹೇರಿವೆ. ಇದಲ್ಲದೇ ಕೆನಡಾ ಕೂಡಾ ವಿಮಾನಯಾನ ಸೇವೆ ರದ್ದು ಮಾಡುವ ನಿರ್ಧಾರವನ್ನು ಪ್ರಕಟಿಸಿದೆ.