ನವದೆಹಲಿ: ನಕ್ಸಲ್ ಪೀಡಿತ 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಭೆ ನಡೆಸಲಿದ್ದಾರೆ. ಈ ರಾಜ್ಯಗಳಲ್ಲಿನ ಪ್ರಸ್ತುತ ಪರಿಸ್ಥಿತಿ, ಭದ್ರತೆ, ಅಭಿವೃದ್ಧಿ ವಿಚಾರವಾಗಿ ಸಭೆಯಲ್ಲಿ ಚರ್ಚಿಸಲಿದ್ದಾರೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ನಕ್ಸಲ್ ಪೀಡಿತ ರಾಜ್ಯಗಳಾದ ಛತ್ತೀಸ್‌ಗಡ, ಜಾರ್ಖಂಡ್, ಬಿಹಾರ, ಒಡಿಶಾ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೇರಳ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸುತ್ತಾರೆ. ಅಥವಾ ರಾಜ್ಯ ಪ್ರತಿನಿಧಿಸುವ ಇತರೆ ಅಧಿಕಾರಿಗಳು ಭಾಗವಹಿಸುವ ಸಾಧ್ಯತೆಯಿದೆ.
ಛತ್ತೀಸ್ಗಡದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸಿದೆ. ಕಳೆದ ಕೆಲವು ವರ್ಷಗಳಲ್ಲಿ ನಕ್ಸಲ್ ಪಡೆ ಅಲ್ಲಿನ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿ, ಅನೇಕ ಸೈನಿಕರನ್ನು ಹತ್ಯೆಗೈದಿದೆ.
ಇದನ್ನೂ ಓದಿ: ಭಯೋತ್ಪಾದನೆಯನ್ನು ಸಾಧನವನ್ನಾಗಿ ಬಳಸಿಕೊಳ್ಳುವ ರಾಷ್ಟ್ರಗಳಿಗೂ ಅದು ಅಪಾಯಕಾರಿ: ಪ್ರಧಾನಿ ಮೋದಿ
ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ಸಂಜೆಯೇ ದೆಹಲಿಗೆ ಆಗಮಿಸಿದ್ದಾರೆ. 10 ನಕ್ಸಲ್ ಪೀಡಿತ ರಾಜ್ಯಗಳಲ್ಲಿ ನಕ್ಸಲರ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆಗಳ ಬಗ್ಗೆ ಗೃಹ ಸಚಿವ ಅಮಿತ್ ಶಾ ಪರಿಶೀಲನೆ ನಡೆಸಲಿದ್ದಾರೆ.