ನವದೆಹಲಿ: ಜನವರಿ 26ರಂದು ನಡೆದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸರ ಯೋಗಕ್ಷೇಮ ವಿಚಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ.
ಗಣರಾಜ್ಯೋತ್ಸವ ದಿನದಂದು ನಡೆದಿದ್ದ ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾತ್ಮಕ ರೂಪ ಪಡೆದಿತ್ತು. ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದ ಪ್ರತಿಭಟನಾನಿರತ ರೈತರು, ಕೋಟೆ ಮೇಲೆ ಧ್ವಜ ಹಾರಿಸಿದ್ದರು. ಪರಿಸ್ಥಿತಿ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಸುಮಾರು 394 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಇವರನ್ನು ಉತ್ತರ ದೆಹಲಿಯ ಎರಡು ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕ (ಐಸಿಯು)ದಲ್ಲಿರಿಸಲಾಗಿದೆ.
ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ: ಮೇಧಾ ಪಾಟ್ಕರ್, ಯೋಗೇಂದ್ರ ಯಾದವ್ ಸೇರಿ 37 ಮಂದಿ ವಿರುದ್ಧ FIR
ಘಟನೆ ಸಂಬಂಧ ಈವರೆಗೆ 19 ಮಂದಿಯನ್ನು ಅರೆಸ್ಟ್ ಮಾಡಲಾಗಿದ್ದು, 50 ಮಂದಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್, ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಸೇರಿ 37 ಮಂದಿ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.