ತಿರುವನಂತಪುರಂ: ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ (ಎನ್‌ಡಿಎ) ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ವಿಚಾರವನ್ನೇ ಪ್ರಮುಖ ಅಸ್ತ್ರವಾಗಿ ಬಳಸಿಕೊಂಡು ಭರ್ಜರಿ ಪ್ರಚಾರ ನಡೆಸುತ್ತಿವೆ.
ಶಬರಿಮಲೆ ಕುರಿತು ಅಂತಿಮ ತೀರ್ಪು ಬಂದ ನಂತರ ರಾಜ್ಯ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗುದುಕೊಂಡು ಸಮಾಲೋಚನೆ ನಡೆಸಿ, ನಂತರ ನಿರ್ಧಾರ ತೆಗೆದುಕೊಳ್ಳಲಿದೆ. ಈ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಸುಪ್ರೀಂಕೋರ್ಟ್‌ನಲ್ಲಿ ಹೊಸ ಅಫಿಡವಿಟ್ ಸಲ್ಲಿಸುತ್ತವೆಯೇ ಎಂದು ಸ್ಪಷ್ಟಪಡಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
ಇನ್ನೊಂದೆಡೆ ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ಅವರ ವಿರುದ್ಧ ಚುನಾವಣೆಗೆ ನಿಂತಿರುವ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್ ಗುರುವಾರ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ಪಕ್ಷದ ಕಾರ್ಯಕರ್ತರು 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂದು ಘೋಷಣೆ ಕೂಗಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಅವರ ವಿರುದ್ಧ ನಾನು ಸ್ಪರ್ಧಿಸಬೇಕೆಂದು ಅವರ 'ಹಣೆಬರಹ'ದಲ್ಲಿ ದೇವರು ಬರೆದಿರಬೇಕು. ದೇವಸ್ವಂ ಸಚಿವರಿಗೆ ಮತದಾರರು ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡುತ್ತಾರೆ. ಈ ಬಾರಿ ಎನ್‌ಡಿಎ ಬಹುಮತದಿಂದ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಕೇರಳದಲ್ಲಿ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6 ರಂದು ಚುನಾವಣೆ ನಡೆಯಲಿದೆ.