ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಭದ್ರತಾ ಪಡೆಯನ್ನು ಗುರಿಯಾಗಿಸಿಟ್ಟುಕೊಂಡು ಭಯೋತ್ಪಾದನಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಪುಲ್ವಾಮಾ ಬಳಿಯ ಟ್ರಾಲ್ ಪ್ರದೇಶದಲ್ಲಿರುವ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಸಂಜೆ 4:30ರ ಸುಮಾರಿಗೆ ಉಗ್ರರು ಜೆಕೆ ಪೊಲೀಸ್ ಮತ್ತು ಭದ್ರತಾ ಪಡೆಯ ಮೇಲೆ ಗ್ರೆನೇಡ್ ಎಸೆದಿದ್ದಾರೆ. ಆದರೆ ಘಟನೆಯಲ್ಲಿ 7 ಮಂದಿ ನಾಗರಿಕರು ಗಾಯಗೊಂಡಿದ್ದಾರೆ. ಭದ್ರತಾ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ 7 ಮಂದಿ ನಾಗರಿಕರಲ್ಲಿ ಇಬ್ಬರನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನುಳಿದ ಐವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಗೊಂಡವರೆಲ್ಲರೂ ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ಶ್ರೀನಗರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇತ್ತ ಭಯೋತ್ಪಾದಕರು ದಾಳಿ ನಡೆಸಿದ ಪ್ರದೇಶದಲ್ಲಿ ಸೈನಿಕರ ಕಾರ್ಯಾಚರಣೆ ಮುಂದುವರೆದಿದೆ.
2019ರ ಫೆಬ್ರವರಿ 14 ರಂದು ಪುಲ್ವಾಮಾದಲ್ಲಿ ಉಗ್ರರು ಆತ್ಮಾಹುತಿ ಕಾರ್ ಬಾಂಬ್ ದಾಳಿ ನಡೆಸಿದ್ದರಿಂದ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಬಳಿಕ ಪಾಕಿಸ್ತಾನದ ಜೈಶ್- ಎ- ಮೊಹಮ್ಮದ್ ಭಯೋತ್ಪಾದಕ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು.