ಇಂದೋರ್ ( ಮಧ್ಯಪ್ರದೇಶ ) : ಕೊರೊನಾ ಲಾಕ್ಡೌನ್ ಹಿನ್ನೆಲೆ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದ 144 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ವಿಶೇಷ ಏರ್ ಇಂಡಿಯಾ ವಿಮಾನ ಮಂಗಳವಾರ ಬೆಳಗ್ಗೆ ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ
ಬೆಳಗ್ಗೆ 5.16ಕ್ಕೆ ವಿಮಾನ ದೆಹಲಿ ಮೂಲಕ ದೇವಿ ಅಹಲ್ಯಾಬಾಯಿ ಹೊಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕಿ ಆರ್ಯಮಾ ಸನ್ಯಾಲ್ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವ 144 ಭಾರತೀಯ ವಿದ್ಯಾರ್ಥಿಗಳು ಆಗಮಿಸಿದ್ದಾರೆ ಎಂದು ಅವರು ಹೇಳಿದರು.
ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರೀಕ್ಷಿಸಿ ಅವರ ವಸ್ತುಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಸನ್ಯಾಲ್ ಹೇಳಿದರು. ವಿಮಾನದಲ್ಲಿ ಆಗಮಿಸಿದ ವಿದ್ಯಾರ್ಥಿಗಳ ಪೈಕಿ ಇಂದೋರ್ನ 29 ಸೇರಿದಂತೆ ಹೆಚ್ಚಿನ ವಿದ್ಯಾರ್ಥಿಗಳು ಮಧ್ಯಪ್ರದೇಶದವರೇ ಆಗಿದ್ದಾರೆ. ಎಲ್ಲರನ್ನು ಏಳು ದಿನಗಳ ಕ್ವಾರಂಟೈನ್ಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನುಳಿದಂತೆ, ಚತ್ತೀಸ್ಗಢ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ವಿದ್ಯಾರ್ಥಿಗಳು ವಿಮಾನದಲ್ಲಿ ಆಗಮಿಸಿದ್ದು, ಅವರನ್ನು ಅವರ ಊರುಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.