ಪೂಂಚ್: ಜಮ್ಮುಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪೂಂಚ್‌ನ ಸಹಾಪೂರ್ ಹಾಗೂ ಕಿರಿಣಿ ಸೆಕ್ಟರ್ನಲ್ಲಿ ಪಾಕ್ ನಡೆಸಿರುವ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, 8 ಮಂದಿ ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಯೋಧರು ಗಡಿ ಪ್ರದೇಶದಲ್ಲಿ ಭಾರತೀಯ ಯೋಧರನ್ನು ಟಾರ್ಗೆಟ್ ಮಾಡಿಕೊಂಡು ಏಕಾಏಕಿಯಾಗಿ ಗುಂಡಿನ ಮಳೆಗೆರೆಯಲು ಆರಂಭಿಸಿದ್ದಾರೆ. ಈ ವೇಳೆ ಸ್ಥಳೀಯ ಮಹಿಳೆಯೂ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿ ರಮೇಶ್ ಅಗ್ರಾಲ್, ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, ಅದಕ್ಕೆ ನಮ್ಮ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ವೇಳೆ ನಮ್ಮ ಇಬ್ಬರು ಯೋಧರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಗಾಯಾಳುಗಳನ್ನು ಪೂಂಚ್‌ನ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.