ನೋಯ್ಡಾ (ಉ.ಪ್ರ): ಉತ್ತರ ಪ್ರದೇಶದ ನೋಯ್ಡಾದಲ್ಲಿ ಬಹುಮಹಡಿ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಕಟ್ಟಡವು ಸೆಕ್ಟರ್ 11ರಲ್ಲಿದ್ದು, ಇದು ಖಾಸಗಿ ಸಂಸ್ಥೆಗೆ ಸೇರಿದೆ. ಸಂಜೆ 7: 30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ತಂಡಗಳು ಹಾಗೂ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಜೊತೆಗೆ ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದೆ.
"ಐದು ಜನರನ್ನು ಕಟ್ಟಡದೊಳಗಿಂದ ರಕ್ಷಿಸಲಾಗಿದೆ. ಅವರಲ್ಲಿ ಇಬ್ಬರು ಮೃತಪಟ್ಟಿದ್ದು, ಇತರ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ " ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಅಲೋಕ್ ಸಿಂಗ್ ಅವರನ್ನು ಸ್ಥಳಕ್ಕೆ ತೆರಳಿ ಪರಿಸ್ಥಿತಿ ಪರಿಶೀಲಿಸುವಂತೆ ಸೂಚನೆ ನೀಡಿದ್ದಾರೆ.
"ಅಗ್ನಿಶಾಮಕ ದಳ, ಪೊಲೀಸ್, ಜಿಲ್ಲಾಡಳಿತ ಮತ್ತು ಆ್ಯಂಬುಲೆನ್ಸ್ಗಳ ತಂಡಗಳು ಶೀಘ್ರವಾಗಿ ಸ್ಥಳಕ್ಕೆ ತಲುಪಿವೆ. ಮುಖ್ಯಮಂತ್ರಿಯವರು ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಅವರ ಸೂಚನೆಯ ಮೇರೆಗೆ ಎನ್‌ಡಿಆರ್‌ಎಫ್ ತಂಡವನ್ನು ಕೂಡಾ ರಕ್ಷಣಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ." ಎಂದು ಅಲೋಕ್ ಸಿಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ.