ಭಿವಾನಿ(ಹರಿಯಾಣ): ಹೋಳಿ ಹಬ್ಬದ ಆಚರಣೆ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ಹೋಳಿ ಹಬ್ಬದ ಆಚರಣೆ ವೇಳೆ ಭಿವಾನಿಯ ಎರಡು ಕುಟುಂಬದ ಇಬ್ಬರು ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದಾಗ ಎರಡೂ ಕುಟುಂಬದ ಸದಸ್ಯರ ವಾಗ್ವಾದ ಶುರುವಾಗಿದೆ. ಈ ವೇಳೆ ಪರಸ್ಪರ ಮಾರಕಾಸ್ತ್ರಗಳಿಂದ ದಾಳಿ ಮಾಡಿಕೊಂಡಿದ್ದಾರೆ. ಘರ್ಷಣೆಯಲ್ಲಿ ಸುಭಾಷ್ ಹಾಗೂ ಮನ್ವೀರ್ ಎಂಬುವವರು ಮೃತಪಟ್ಟಿದ್ದಾರೆ.
ಎರಡೂ ಕುಟುಂಬಗಳ ಏಳು ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.