ಲಡಾಖ್: ಗಲ್ವಾನ್ ಬಳಿ ಭಾರತ ಹಾಗೂ ಚೀನಾ ಸೈನಿಕರ ಮಧ್ಯೆ ಸಂಘರ್ಷ ಮುಂದುವರೆದಿದ್ದು, ಚೀನೀ ಪಡೆಗಳು ನಡೆಸಿದ ದಾಳಿಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.
ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಾದ ಸೈನಿಕರೊಂದಿಗೆ ನಡೆದ ಮುಖಾಮುಖಿಯಲ್ಲಿ ಇಪ್ಪತ್ತು ಭಾರತೀಯ ಸೈನಿಕರು ವೀರ ಮರಣ ಹೊಂದಿದ್ದಾರೆ. ಭಾರತೀಯ ಪಡೆಗಳು ನಡೆಸಿದ ಪ್ರತಿ ದಾಳಿಯಲ್ಲಿ ಚೀನೀ ಪಡೆಯ 43 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಹಲವರು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 5ರಿಂದ ಶುರುವಾದ ಉಭಯ ದೇಶಗಳ ನಡುವಿನ ಸಂಘರ್ಷ ಇದೀಗ ಯುದ್ಧದ ವಾತಾವರಣ ಸೃಷ್ಟಿಸಿದೆ.
ಭಾರತೀಯ ಪಡೆಗಳು ಗಡಿ ಉಲ್ಲಂಘನೆ ಮಾಡಿವೆ ಎಂಬ ಚೀನಾ ಹೇಳಿಕೆಯನ್ನು ಭಾರತ ತಳ್ಳಿಹಾಕಿದ್ದು, ಗಲ್ವಾನ್ ಪ್ರದೇಶದಲ್ಲಿ ಚೀನಾ ಪಡೆಗಳು ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಘರ್ಷ ನಡೆಸುತ್ತಿದೆ ಎಂದು ಸ್ಪಷ್ಟನೆ ನೀಡಿದೆ.
ಭಾರತವು ತನ್ನ ಎಲ್ಲಾ ಚಟುವಟಿಕೆಗಳನ್ನು ಯಾವಾಗಲೂ ವಾಸ್ತವ ನಿಯಂತ್ರಣ ರೇಖೆಯ ಮೇಲೆ ನಡೆಸಲಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.