ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಭ್ರಷ್ಟರ ಬೇಟೆ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳವು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಅನುಮಾನದ ಹಿನ್ನೆಲೆ ಬರೋಬ್ಬರಿ 35 ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿದೆ ಎಂದು ಉನ್ನತ ಮೂಲಗಳು ಬುಧವಾರ ತಿಳಿಸಿವೆ.
ಆಹಾರ, ನಾಗರಿಕ ಸರಬರಾಜು ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಐವರು ಅಧಿಕಾರಿಗಳು, ಸಾರಿಗೆ ಇಲಾಖೆಯಿಂದ ಇಬ್ಬರು, ಕಂದಾಯ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತಲಾ ಒಬ್ಬರು, ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಇಲಾಖೆಯಿಂದ 24 ಮತ್ತು ಲೋಕೋಪಯೋಗಿ (ಆರ್ ಮತ್ತು ಡಿ) ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ರಾಜ್ಯದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರವನ್ನು ತಗ್ಗಿಸುವ ಸಲುವಾಗಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇತ್ತೀಚೆಗೆ ವಿವಿಧ ಇಲಾಖೆಗಳ ವಿಜಿಲೆನ್ಸ್ ಘಟಕಗಳಿಗೆ ಅಧಿಕಾರ ನೀಡಿದ್ದರು.
ಅದರಂತೆ ಭ್ರಷ್ಟ ಅಧಿಕಾರಿಗಳ ಬೇಟೆಗಿಳಿದ ವಿಜಿಲೆನ್ಸ್ ಘಟಕ ಸುಮಾರು 35 ಹಿರಿಯ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಅಲ್ಲದೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮಕೈಗೊಳ್ಳಲು ಮತ್ತು ವಿಳಂಬ ಮಾಡದಂತೆ ಅವರ ಮೇಲೆ ಎಫ್‌ಐಆರ್ ದಾಖಲು ಮಾಡಲು ಶಿಫಾರಸು ಹೊರಡಿಸುವಂತೆ ಜಿಲ್ಲಾ ಮಟ್ಟದ ವಿಜಿಲೆನ್ಸ್ ಅಧಿಕಾರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ನಿರ್ದೇಶನ ಸಹ ನೀಡಿದ್ದಾರೆ.
ಶ್ರೀನಗರದ ಸಿವಿಲ್ ಸೆಕ್ರೆಟರಿಯಟ್ನಲ್ಲಿ ಆಡಳಿತ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಲೆಫ್ಟಿನೆಂಟ್ ಗವರ್ನರ್ ಅವರು ಈ ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗುತ್ತಿದೆ.