ಕೊಂಡಗಾಂವ್(ಛತ್ತೀಸ್ಗಢ) : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ಕಾರು ಮತ್ತು ಎರಡು ಮೋಟರ್ ಸೈಕಲ್ಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಬಾಲಕಿ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಅಪಘಾತ ಬಹಳ ಭೀಕರವಾಗಿತ್ತು ಎಂದು ತಿಳಿದು ಬಂದಿದೆ. ಮಹಿಳೆಗೆ ಹೆರಿಗೆ ಆದ ಬಳಿಕ ಆಸ್ಪತ್ರೆಯಿಂದ ಕಾರಿನಲ್ಲಿ ಐವರು ಘೋರಗಾಂವ್ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅದರಲ್ಲಿ ನವಜಾತ ಶಿಶು ಕೂಡ ಪ್ರಯಾಣಿಸುತ್ತಿತ್ತು.
ಕೊಂಡಗಾಂವ್ ಪೊಲೀಸ್ ಠಾಣಾ ವ್ಯಾಪ್ತಿ ಬಳಿ ಬರುತ್ತಿದ್ದಂತೆ ವಿರುದ್ಧ ದಿಕ್ಕಿನಲ್ಲಿ ಬಂದ ಎರಡು ಮೋಟಾರ್ ಸೈಕಲ್ಗಳು ರಭಸವಾಗಿ ಡಿಕ್ಕಿ ಹೊಡೆದಿವೆ. ಪರಿಣಾಮ ಬೈಕ್ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಎಲ್ಲರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಂತೆ ಕೊಂಡಗಾಂವ್ ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.