ಕೋಲ್ಕತಾ (ಪಶ್ಚಿಮ ಬಂಗಾಳ): ಸರ್ಕಾರದಿಂದ ಪಶ್ಚಿಮ ಬಂಗಾಳ ರಾಜ್ಯದ ದುರ್ಗಾ ಪೂಜಾ ಸಮಿತಿಗಳಿಗೆ ತಲಾ 50 ಸಾವಿರ ರೂಪಾಯಿ ಅನುದಾನ ನೀಡುವ ನಿರ್ಧಾರಕ್ಕೆ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಬೆಂಬಲ ಸೂಚಿಸಿದ್ದಾರೆ.
ಸೆಪ್ಟೆಂಬರ್ 24ರಂದು ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿರುವ 36,946 ದುರ್ಗಾ ಪೂಜಾ ಸಮಿತಿಗಳಿಗೆ ತಲಾ 50 ಸಾವಿರ ರೂಪಾಯಿ ನೀಡುವುದಾಗಿ ಘೋಷಿಸಿದ್ದರು. ಮಮತಾ ಬ್ಯಾನರ್ಜಿ ಅವರ ಈ ನಿರ್ಧಾರಕ್ಕೆ ವಿಪಕ್ಷಗಳು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದವು.
ಕಲ್ಕತ್ತಾ ಹೈಕೋರ್ಟ್ನಲ್ಲಿ ಮಮತಾ ಬ್ಯಾನರ್ಜಿ ಅವರ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಭಿಜಿತ್ ಬ್ಯಾನರ್ಜಿ ದೀದಿ ಅವರ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರ ಜೊತೆಗೆ ದುರ್ಗಾ ಪೂಜೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ಮತ್ತಷ್ಟು ಹಣವನ್ನು ದೂರ್ಗಾ ಪೂಜಾ ಸಂಘಟಕರಿಗೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ನಿರ್ಧಾರ ಕೆಟ್ಟ ನಿರ್ಧಾರವಲ್ಲ ಎಂದು ಸ್ಥಳೀಯ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದು ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ದುರ್ಗಾಪೂಜೆ ವೇಳೆ ಜನರು ಆದಷ್ಟು ಸುರಕ್ಷಿತರಾಗಿರಬೇಕೆಂದು ಮನವಿ ಮಾಡಿದ್ದಾರೆ.
ಇದರ ಜೊತೆಗೆ ಭಾರತದ ಆರ್ಥಿಕತೆ ಸಾಮಾನ್ಯ ಸ್ಥಿತಿಗೆ ಮರಳಲು ವರ್ಷಗಳು ಬೇಕಾಗುತ್ತದೆ. ದೇಶದ ಆರ್ಥಿಕತೆಯ ಮೇಲೆ ಕೊರೊನಾ ದುಷ್ಪರಿಣಾಮ ಬೀರಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಮತ್ತೊಂದೆಡೆ ಸರ್ಕಾರ '' ಕೊರೊನಾ ಸುರಕ್ಷಾ ಸಾಧನಗಳನ್ನು ಅಳವಡಿಸಿಕೊಳ್ಳಲು ಹಾಗೂ ಜನರ ಮತ್ತು ಪೊಲೀಸರ ನಡುವಿನ ಸಾಮರಸ್ಯ ಹೆಚ್ಚಿಸಲು, ಜಾತ್ಯತೀತತೆಯ ಪ್ರೋತ್ಸಾಹಿಸಲು ಹಣ ನೀಡಲಾಗುತ್ತದೆ'' ಎಂದು ಕೋರ್ಟ್ಗೆ ಮಾಹಿತಿ ನೀಡಿದೆ.