ಚೆನ್ನೈ (ತಮಿಳುನಾಡು): ತಮಿಳುನಾಡಿನಲ್ಲಿ ಮತ್ತೋರ್ವ ಶಾಸಕನಿಗೆ ಕೊರೊನಾ ಸೋಂಕು ತಗುಲಿದೆ. ವೈರಸ್ ಕಂಡುಬಂದಿರುವ ಎಐಎಡಿಎಂಕೆ ಎಂಎಲ್ಎ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದ್ದಾರೆ.
ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಶಾಸಕ ಕೆ. ಪಳನಿ ಕಾಂಚೀಪುರಂ ಜಿಲ್ಲೆಯ ಶ್ರೀಪೆರುಂಬುದೂರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಪಳನಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂಬ ಮಾಹಿತಿಯಿದೆ.
ಕೋವಿಡ್ ನಿಯಂತ್ರಣಕ್ಕೆ ತಮ್ಮ ಕ್ಷೇತ್ರದಲ್ಲಿ ಶಾಸಕರು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದರು. ಈ ಸಂದರ್ಭದಲ್ಲಿ ಸೋಂಕು ತಗುಲಿರುವ ಸಾಧ್ಯತೆಯಿದೆ. ಪಕ್ಷದ ಉನ್ನತ ನಾಯಕರು ಈ ಬಗ್ಗೆ ಸಂಪರ್ಕದಲ್ಲಿದ್ದು, ಶಾಸಕರ ಆರೋಗ್ಯ ಸ್ಥಿತಿ ಬಗ್ಗೆ ನಿಗಾವಹಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಕೆಲದಿನಗಳ ಹಿಂದೆ ಡಿಎಂಕೆ ಶಾಸಕ ಜೆ.ಅನ್ಬಳಗನ್ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಇವರು ಕೊರೊನಾ ಸೋಂಕಿನಿಂದ ಮೃತಪಟ್ಟ ಮೊದಲ ಶಾಸಕರಾಗಿದ್ದಾರೆ.