ಭುವನೇಶ್ವರ(ಒಡಿಶಾ): ದೇಶದ ಎಲ್ಲಾ ಜನರಿಗೆ ಉಚಿತ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರ ರಾಜಕೀಯ ಕಾರಣಗಳಿಗೆ ಸಾಂಕ್ರಾಮಿಕ ರೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಪ್ರತಿ ವ್ಯಕ್ತಿಗೆ ಕೋವಿಡ್ ಲಸಿಕೆ ಹಾಕಲು ಅಂದಾಜು 500 ರೂ.ಗಳನ್ನು ಖರ್ಚು ಮಾಡಲಾಗುವುದು ಎಂದು ಬಾಲಂಗೋರ್‌ನಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆಯ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಾರಂಗಿ ಸುದ್ದಿಗಾರರಿಗೆ ತಿಳಿಸಿದರು.
ಒಡಿಶಾ ಆಹಾರ ಸರಬರಾಜು ಮತ್ತು ಗ್ರಾಹಕ ಕಲ್ಯಾಣ ಸಚಿವ ಆರ್.ಪಿ.ಸ್ವೈನ್ ಕೇಳಿದ ಪ್ರಶ್ನೆಗೆ ಉತ್ತರವಾಗಿ ಕೇಂದ್ರ ಪಶುಸಂಗೋಪನೆ, ಮೀನುಗಾರಿಕೆ ಮತ್ತು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವ ಸಾರಂಗಿ ಮಾತನಾಡಿದರು.
ತಮಿಳುನಾಡು, ಮಧ್ಯಪ್ರದೇಶ, ಅಸ್ಸಾಂ ಮತ್ತು ಪುದುಚೇರಿ ಸರ್ಕಾರಗಳು ಈಗಾಗಲೇ ತಮ್ಮ ರಾಜ್ಯಗಳ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ಘೋಷಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೇಶಾದ್ಯಂತದ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆ ನೀಡುವಂತೆ ಒತ್ತಾಯಿಸಿದ್ದಾರೆ.